ಬೆಂಗಳೂರು: ಬಳ್ಳಾರಿಯ ಸಂಡೂರಿನಲ್ಲಿ ಅತ್ಯಂತ ಕಡಿಮೆ ಬೆಲೆಗೆ 3,667 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಿರುವ ಆದೇಶ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಭೂ ಮಂಜೂರಾತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಸರ್ಕಾರಿ ಭೂಮಿಯನ್ನು ಜಿಂದಾಲ್ಗೆ ಮಂಜೂರು ಮಾಡಿರುವ ಕ್ರಮ ಆಕ್ಷೇಪಿಸಿ ನಗರದ ಕೆ.ಎ. ಪಾಲ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲ ಎಸ್. ದೊರೆರಾಜು, ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಖಾಸಗಿ ಸಂಸ್ಥೆಗೆ ನೀಡುವ ಬಗ್ಗೆ ಸಚಿವ ಸಂಪುಟ 2021ರ ಏ.26ರಂದು ತರಾತುರಿಯಲ್ಲಿ ನಿರ್ಧಾರ ತೆಗೆದುಕೊಂಡಿದೆ. ಇದೇ ನಿರ್ಧಾರವನ್ನು ಮೇ 27ರಂದು ತಡೆ ಹಿಡಿದಿದ್ದರೂ ಈ ಸಂಬಂಧ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಇವೆಲ್ಲವನ್ನೂ ಗಮನಿಸಿದರೆ, ಸರ್ಕಾರದ ಪಾರದರ್ಶಕವಾಗಿ ನಡೆದುಕೊಂಡಿಲ್ಲ ಎಂಬುದು ಕಾಣುತ್ತದೆ. ಹೀಗಾಗಿ, ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ವಾದಿಸಿ, ಅಜಿದಾರರು ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ. ಅರ್ಜಿಯಲ್ಲಿ ಪ್ರತಿವಾದಿಯಾಗಿರದ ಮುಖ್ಯಮಂತ್ರಿಗಳನ್ನು ಸರ್ವಾಧಿಕಾರಿ ಎಂದು ನಮೂದಿಸಲಾಗಿದೆ. ಅರ್ಜಿದಾರರ ಈ ನಡೆ ಒಪ್ಪುವಂತದ್ದಲ್ಲ ಎಂದು ಆಕ್ಷೇಪಿಸಿದರು. ವಾದ ಪ್ರತಿವಾದ ಆಲಿಸಿದ ಪೀಠ, ಜಮೀನು ಮಂಜೂರು ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲ ದಾಖಲೆಗಳು, ಆದೇಶದ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ನಿರ್ದೇಶಿಸಿ, ಜೂ.15ಕ್ಕೆ ವಿಚಾರಣೆ ಮುಂದೂಡಿತು.
ಅರ್ಜಿದಾರರ ಆಕ್ಷೇಪ : ರಾಜ್ಯ ಸರ್ಕಾರ ಬಳ್ಳಾರಿಯ ಸಂಡೂರಿನಲ್ಲಿ 3,667 ಎಕರೆ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ ಪರಭಾರೆ ಮಾಡಿದೆ. ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರವಿದ್ದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್ ಯಡಿಯೂರಪ್ಪ ಇದೇ ನಿರ್ಧಾರವನ್ನು ವಿರೋಧಿಸಿದ್ದರು. 2019ರಲ್ಲಿ ವಿರೋಧಿಸಿದ್ದ ಬಿಎಸ್ವೈ ಅವರ ಸರ್ಕಾರವೇ ಇದೀಗ ಖಾಸಗಿ ಸಂಸ್ಥೆಗೆ ಜಮೀನು ನೀಡಿದೆ. ಸರ್ಕಾರ ತನ್ನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಂಡಿಲ್ಲ. ಆದ್ದರಿಂದ ಭೂ ಪರಭಾರೆ ಸಂಬಂಧ ಸಚಿವ ಸಂಪುಟ ಕೈಗೊಂಡ ನಿರ್ಧಾರಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು, ಆದೇಶಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಭೂ ಪರಭಾರೆಗೆ ಸಂಬಂಧಿಸಿದಂತೆ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ರದ್ದುಪಡಿಸಬೇಕು. ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ ಮೇಲುಸ್ತುವಾರಿಯಲ್ಲಿ ಸ್ವತಂತ್ರ ಸಂಸ್ಥೆ ನೇಮಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.