ಮಂಗಳೂರು: ಹೊರ ರಾಜ್ಯದ ವಲಸೆ ಕಾರ್ಮಿಕರಿಗೆ ತಮ್ಮ ತವರಿಗೆ ಹೋಗಲು ಅಗತ್ಯ ಇರುವಷ್ಟು ರೈಲು ಸಂಚಾರ ಏರ್ಪಡಿಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರೊಂದಿಗೆ ಮಾತನಾಡಿದ್ದು, ಮಂಗಳೂರಿಗೆ ಅಗತ್ಯವಿರುವಷ್ಟು ರೈಲು ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಆಯಾ ರಾಜ್ಯದ ಕಾರ್ಮಿಕರನ್ನು ಸಂಬಂಧಪಟ್ಟ ರಾಜ್ಯಗಳು ಸ್ವೀಕರಿಸಲು ಒಪ್ಪಿಗೆ ನೀಡಬೇಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯದ ಕಾರ್ಮಿಕರಿಗೆ ಸಂಬಂಧಿಸಿದ ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸಿ ಪ್ರಯಾಣಕ್ಕೆ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾತನಾಡಿ, ಸೇವಾ ಸಿಂಧು ವ್ಯವಸ್ಥೆಯಲ್ಲಿ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಹೋಗಲು ಸುಮಾರು 20 ಸಾವಿರ ಮಂದಿ ನೋಂದಣಿ ಮಾಡಿದ್ದಾರೆ. ಇದರಲ್ಲಿ 5 ಸಾವಿರ ಮಂದಿ ಜಾರ್ಖಂಡ್, 3 ಸಾವಿರ ಮಂದಿ ಉತ್ತರ ಪ್ರದೇಶ, 4 ಸಾವಿರ ಮಂದಿ ಬಿಹಾರ ರಾಜ್ಯಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ, ಅಪರ ಜಿಲ್ಲಾಧಿಕಾರಿ ರೂಪಾ ಮತ್ತಿತರರು ಉಪಸ್ಥಿತರಿದ್ದರು.