ಚಿಕ್ಕೋಡಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಮದುವೆ ಸಮಾರಂಭಗಳಲ್ಲಿ ಹೆಚ್ಚಿನ ಜನರು ಸೇರದಂತೆ ಕಟ್ಟುನಿಟ್ಟಾಗಿ ಸಮಾರಂಭಗಳನ್ನು ನಡೆಸಬೇಕು. ಆಯಾ ತಾಲೂಕಿನ ದಂಡಾಧಿಕಾರಿಗಳ ಅನುಮತಿ ಪಡೆಯಬೇಕೆಂದು ಆದೇಶಿಸಿದೆ. ಆದರೆ, ಚಿಕ್ಕೋಡಿ ತಾಲೂಕಿನಲ್ಲಿ ಯಾವುದೆ ಅನುಮತಿ ಪಡೆಯದೆ ಮದುವೆ ಸಮಾರಂಭಗಳು ನಡೆಯುತ್ತಿವೆ.
ಅನುಮತಿ ಪಡೆಯದೆ ಮದುವೆ ಸಮಾರಂಭಗಳು ನಡೆದರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದುದು ಎಂದು ಚಿಕ್ಕೋಡಿ ತಹಶೀಲ್ದಾರ್ ಹೇಳಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚಿಕ್ಕೋಡಿ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ ವೆಂಟಿಲೇಟರ್, ಆಕ್ಸಿಜನ್, ಡಾಕ್ಟರ್ಸ, ಬೆಡ್ಗಳು ಸೇರಿದಂತೆ ಕೊರೊನಾ ಮುಂಜಾಗ್ರತೆಯಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಿಕ್ಕೋಡಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ತಾಲೂಕಾಡಳಿತದ ಅನುಮತಿಯನ್ನು ಪಡೆಯದೇ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ 200-300 ಜನರನ್ನು ಸೇರಿಸಿ ಮದುವೆಗಳನ್ನು ಮಾಡುತ್ತಿದ್ದಾರೆ. ಅಂತಹ ಪ್ರಕರಣಗಳು ನಮ್ಮ ಗಮನಕ್ಕೆ ಬಂದರೆ ಅಂತಹವರ ಮೇಲೆ ನೇರವಾಗಿ ಯಾವುದೇ ಮುಲಾಜಿಲ್ಲದೆ ಕಾನೂನಿನ ರೀತಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ತಾಲೂಕಾಡಳಿತದ ಅನುಮತಿ ಪಡೆದುಕೊಂಡು ಕೇವಲ 50 ಜನರನ್ನು ಸೇರಿಸಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಮದುವೆಗಳನ್ನು ಮಾಡಿ ತಾಲೂಕಾಡಳಿತಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.