ಬೆಂಗಳೂರು: ಕೊರೊನಾ ಎರಡನೇ ಅಲೆ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ಮೇ 10ರಿಂದ 24ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ನರೇಗಾ ಯೋಜನೆಯಡಿ ಏಪ್ರಿಲ್ನಿಂದ ಜೂನ್ವರೆಗೆ ಕೆಲಸದ ಬೇಡಿಕೆ ಹೆಚ್ಚಿರುತ್ತದೆ. ಈ ಅವಧಿಯಲ್ಲಿ ಅತಿ ಹೆಚ್ಚು ಕಾರ್ಮಿಕರು ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾರೆ. ಕಾಮಗಾರಿ ವೇಳೆ ಜನರು ಒಂದೇ ಕಡೆ ಗುಂಪಾಗಿ ಸೇರಿ ಕೆಲಸ ಮಾಡುವುದರಿಂದ ಸೋಂಕು ಹರಡುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಕೂಲಿಕಾರರು ಮತ್ತು ಯೋಜನೆಯ ಅನುಷ್ಠಾನದಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿಗಳ ಸುರಕ್ಷತೆ ದೃಷ್ಟಿಯಿಂದ ಮೇ 10ರಿಂದ 24ರವರೆಗೆ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗುವುದಿಲ್ಲ. ಆದರೆ, ಈ ಅವಧಿಯಲ್ಲಿ ಗ್ರಾಮ ಪಂಚಾಯಿತಿಗಳು ಜನರಿಂದ ಕೆಲಸದ ಬೇಡಿಕೆ ಅರ್ಜಿಗಳನ್ನು ಸ್ವೀಕರಿಸಬೇಕು. ಮತ್ತು ಮೇ 25ರಿಂದ ಕೆಲಸ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.