ನವದೆಹಲಿ: ಕೋವಿಡ್ ಲಾಕ್ಡೌನ್ ಸಮಯದಲ್ಲಿ ಮುಂದೂಡಲ್ಪಟ್ಟ ಇಎಂಐಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡುವ ನಿರ್ಧಾರವು ಮುಂದುವರೆದ ಹಂತದಲ್ಲಿದ್ದು, ಎರಡು ಅಥವಾ ಮೂರು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಇಎಂಐ ಮರುಪಾವತಿ ಅವಧಿ ವಿಸ್ತರಣೆ, ಇಎಂಐಗಳ ಮೇಲಿನ ಚಕ್ರಬಡ್ಡಿ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸುವುದಾಗಿ ಈ ಹಿಂದೆ ನಡೆದ ವಿಚಾರಣೆ ವೇಳೆ ಕೇಂದ್ರ ಸುಪ್ರೀಂಗೆ ತಿಳಿಸಿತ್ತು.
ಇಂದಿನ ವಿಚಾರಣೆಯಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಎರಡು ಅಥವಾ ಮೂರು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾ. ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.