ನವದೆಹಲಿ: ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸಲು ದೇಶಕ್ಕೆ ಮತ್ತೊಂದು ಹಸಿರು ಕ್ರಾಂತಿಯ ಅಗತ್ಯವಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ (ಐಎಆರ್‌ಐ) ಹೊಸದಾಗಿ ನಿರ್ಮಿಸಿದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ತೋಮರ್, 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ. ಈ ಗುರಿಯನ್ನು ಸಾಧಿಸಲು ಹದಿನಾರು ಅಂಶಗಳ ಕಾರ್ಯಸೂಚಿಯನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ ಎಂದರು.
ಹೆಚ್ಚುತ್ತಿರುವ ಜನಸಂಖ್ಯೆಯ ದೃಷ್ಟಿಯಿಂದ ಆಹಾರ ಧಾನ್ಯ ಪೂರೈಕೆ ಹೆಚ್ಚಿಸಲು ಎರಡನೇ ಹಸಿರು ಕ್ರಾಂತಿಯ ಅವಶ್ಯಕತೆಯಿದೆ. ಜಾರ್ಖಂಡ್ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಈ ಕ್ರಾಂತಿಯನ್ನು ತರಲು ಅಪಾರ ಸಾಮರ್ಥ್ಯವಿದೆ ಎಂದು ಹೇಳಿದರು.
ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಮತ್ತು ಒಂದು ದೇಶ, ಒಂದು ಶಾಸನದ ಬಗ್ಗೆ ಜಾಗೃತಿ ಮೂಡಿಸಿ ಕಾಶ್ಮೀರದಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನ ಇಂದು. ಅವರಿಗಾಗಿ ಈ ಕಟ್ಟಡ ಅರ್ಪಿಸುತ್ತಿದ್ದೇವೆ ಎಂದರು.
ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳು, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಗೆ 2020-21ರ ಬಜೆಟ್‌ನಲ್ಲಿ ಸರ್ಕಾರವು 2.83 ಲಕ್ಷ ಕೋಟಿ ರೂ. ಮೀಸಲಿಟ್ಟಿದೆ. ಇದು ಇಲ್ಲಿಯವರೆಗೆ ಕೃಷಿ ಕ್ಷೇತ್ರಕ್ಕೆ ನೀಡಿದ ಅತಿ ಹೆಚ್ಚಿನ ಹಂಚಿಕೆಯಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.