ಲಂಡನ್: ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಮದ್ಯ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ವಜಾಗೊಳಿಸಿದೆ.
ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ 64 ವರ್ಷದ ಕಿಂಗ್ ಪಿಶರ್ ಮಾಲೀಕ ಈ ವರ್ಷ ಫೆಬ್ರವರಿ ತಿಂಗಳಲ್ಲಿ ಬ್ರಿಟನ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಬ್ರಿಟನ್ ಹೈಕೋರ್ಟ್ ನ್ಯಾಯಾಧೀಶರಾದ ಸ್ಟೀಫನ್ ಇರ್ವಿನ್ ಮತ್ತು ಎಲಿಜಬೆತ್ ಲಾಯಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.
ಭಾರತದ ಬ್ಯಾಂಕ್ಗಳಿಗೆ ಸುಮಾರು 9,000 ಕೋಟಿ ರೂ. ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು 2018ರ ಡಿಸೆಂಬರ್‌ನಲ್ಲಿ ಬ್ರಿಟನ್‌ನ ವೆಸ್ಟ್‌ಮಿನ್‌ಸ್ಟರ್ ನ್ಯಾಯಾಲಯ ಆದೇಶ ನೀಡಿತ್ತು. ಮಲ್ಯ ಗಡಿಪಾರಿಗೆ 2019ರ ಫೆಬ್ರುವರಿಯಲ್ಲಿ ಬ್ರಿಟನ್ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.