ನವದೆಹಲಿ: ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಇಂಧನ ದರವು ಶೇ. 30ರಷ್ಟು ಇಳಿಕೆಯಾಗಿದೆ ಇದರ ಪ್ರಯೋಜನವನ್ನು ಜನಸಾಮಾನ್ಯರಿಗೆ ವರ್ಗಾಯಿಸುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ಟ್ವಿಟ್ಟರ್ನಲ್ಲಿ ವ್ಯಂಗ್ಯವಾಡಿದ್ದಾರೆ.
ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವಲ್ಲಿ ಅವಿರತವಾಗಿ ನಿರತವಾಗಿರುವ ಪ್ರಧಾನಿಯವರ ಕಚೇರಿ, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲವು ಶೇ. 35ರಷ್ಟು ಇಳಿಕೆಯಾಗಿದ್ದರೂ ದರಗಳ ಇಳಿಕೆಯ ಲಾಭವನ್ನು ಜನರಿಗೆ ವರ್ಗಾಯಿಸುವುದನ್ನು ಮರೆತಂತೆ ಕಾಣುತ್ತಿದೆ ಎಂದು ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಕಾಂಗ್ರೆಸ್ನ ಹಲವು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯವಾಗಿ ರಾಜ್ಯದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಹಾಗಾಗಿ ಸಿಎಂ ಕಮಲ್ ನಾಥ್ ಅವರ ಕಾಂಗ್ರೆಸ್ ನೇತೃತ್ವದ ಸರ್ಕಾರ ಡೋಲಾಯಮಾನ ಸ್ಥಿತಿಯಲ್ಲಿದೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಪ್ರತಿಕ್ರಿಯೆ ಹೊರಬಿದ್ದಿದೆ.