ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಇಂದು ಒಂದೇ ದಿನ 16 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.
9 ಮಂದಿ ವಿದ್ಯಾರ್ಥಿಗಳಿಗೆ ಹಾಗೂ 7 ಜನ ಗ್ರಾಮಸ್ಥರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ರಾಯಬಾಗ ತಹಶೀಲ್ದಾರ್ ಮೋಹನ್ ಭಸ್ಮೆ, ತಾಲೂಕು ವೈದ್ಯಾಧಿಕಾರಿ ಎಸ್.ಎಸ್. ಬಾನೆ, ತಾಲೂಕು ಅಧಿಕಾರಿಗಳಾದ ಸಿ.ಸಿ. ಹಿರೇಮಠ, ಶಂಕರ ಪಾಟೀಲ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ರಾಯಬಾಗ ತಾಲೂಕು ವೈದ್ಯಾಧಿಕಾರಿ ಎಸ್.ಎಸ್ ಬಾನೆ, ಗ್ರಾಮದಲ್ಲಿ ಒಂದೇ ದಿನ 16 ಕೊರೊನಾ ಪ್ರಕರಣ ಪತ್ತೆಯಾಗಿವೆ. ಕೊರೊನಾ ಸೋಂಕಿತರನ್ನು ಅವರ ಮನೆಗಳಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ಗ್ರಾಮಸ್ಥರಿಗೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ತಿಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಬಂದ ಹಿನ್ನೆಲೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸಂಪರ್ಕಿತರನ್ನು ಚಿಕಿತ್ಸೆಗೆ ಒಳಪಡಿಸುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು ಸಮೀಪದ ನಸಲಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಹಾಕಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಇನ್ನು ಬಾವನಸೌಂದತ್ತಿ ಗ್ರಾಮದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದ ಹಿನ್ನೆಲೆ ಗ್ರಾಮದ ಸುಗಂದಾ ದೇವಿ ಜಾತ್ರೆ ರದ್ದುಗೊಳಿಸಲಾಗಿದೆ.