ಬೆಳಗಾವಿ: ಶಾಲಾ- ಕಾಲೇಜುಗಳಲ್ಲಿ 'ಧರ್ಮವಸ್ತ್ರ' ಧರಿಸಿ ಬರಕೂಡದು ಎಂಬ ಹೈಕೋರ್ಟ್ ಆದೇಶದ ಮಧ್ಯೆಯೇ, ಇಂದಿನಿಂದ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಲೆಯೊಂದರಲ್ಲಿ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದ್ದಾರೆ.
ನಗರದ ಸರ್ದಾರ್ ಹೈಸ್ಕೂಲ್ನಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದಾಗ, ಉಪಸ್ಥಿತರಿದ್ದ ಶಾಸಕ ಅನಿಲ ಬೆನಕೆ ಅವರು, ಮಕ್ಕಳಿಗೆ ಗುಲಾಬಿ ಹೂ ನೀಡಿ ಶುಭ ಕೋರಿದ್ದಾರೆ. ಇದೇ ವೇಳೆ ಹಿಜಾಬ್ ಧರಿಸಿ ಬಂದ ಮಕ್ಕಳನ್ನೂ ಶಾಸಕರು ಹೂ ನೀಡಿ ಬರಮಾಡಿಕೊಂಡಿದ್ದಾರೆ. ಪರೀಕ್ಷೆ ಸುಗಮವಾಗಿ ನಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 78,587 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಈ ಪೈಕಿ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 33,807 ವಿದ್ಯಾರ್ಥಿಗಳಿದ್ದರೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 44,780 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 296 ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಹಾಯಕ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಕೆಮ್ಮು, ನೆಗೆಡಿ, ಜ್ವರ ಇದ್ದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗೆ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ, ಅದನ್ನು ತೆಗೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಬೇಕು ಎಂದು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ್ ಹಾಗೂ ಡಿಡಿಪಿಐ ಬಸವರಾಜ ನಾವಲಗಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
ಓದಿ: ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ; ನಮಗೆ ಹಿಜಾಬ್ಗಿಂತ ಮಕ್ಕಳ ಭವಿಷ್ಯವೇ ಮುಖ್ಯ ಎಂದ ತಾಯಿ!