ಬೆಳಗಾವಿ : ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ (ಇಂದು) ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಮತಾಂತರ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ಕಾಯ್ದೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದು ಪ್ರಮುಖ ನಿರ್ಧಾರವೂ ಆಗಿದೆ.
ಓದಿ: ಚಂಡಮಾರುತಕ್ಕೆ ತತ್ತರಿಸಿದ ಫಿಲಿಪ್ಪಿನ್ಸ್... ಸಾವಿನ ಸಂಖ್ಯೆ 375ಕ್ಕೇರಿಕೆ!
ಪ್ರತಿ ಪಕ್ಷಗಳ ವಿರೋಧದ ನಡುವೆಯೂ ಕಾಯ್ದೆಯನ್ನು ಜಾರಿಗೆ ತರಲು ಬಿಜೆಪಿ ಮುಂದಾಗಿದೆ. ವಿಧಾನಸಭೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಪರಿಷತ್ತಿನಲ್ಲಿ ಪೂರ್ಣ ಬಹುಮತಕ್ಕೆ ಜೆಡಿಎಸ್ ಸದಸ್ಯರ ಬೆಂಬಲ ಅನಿವಾರ್ಯವಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದೇ ವಿಧೇಯಕ ಮಂಡಿಸುತ್ತೇವೆ ಎಂದು ತಿಳಿಸಿದ್ದಾರೆ. ಆರ್ ಅಶೋಕ್ ಸೇರಿದಂತೆ ಹಲವು ಸಚಿವರು ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಹಿಂದಿನ ಸಚಿವ ಸಂಪುಟ ಸಭೆಯ ಅಜೆಂಡಾದಲ್ಲಿ ಮತಾಂತರ ನಿಷೇಧ ಕಾಯ್ದೆ ವಿಚಾರ ಪ್ರಸ್ತಾಪ ಆಗಿರಲಿಲ್ಲ. ಆದರೆ, ಸಭೆಯಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ಪಡೆದ ಸಿಎಂ ಕಾಯ್ದೆ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ.