ಚಿಕ್ಕೋಡಿ (ಬೆಳಗಾವಿ): ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಪ್ರತಿಭಟಿಸಲಾಯಿತು.
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಕೊರೊನಾ ತಡೆಗಟ್ಟುವಿಕೆ ಹೆಸರಿನಲ್ಲಿ ಬಿಜೆಪಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ವಿವಿಧ ವಸ್ತುಗಳ ಖರೀದಿಯಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ನಡೆಸಿದೆ ಎಂದು ಆರೋಪಿಸಲಾಯಿತು.
ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಬಂಡವಾಳಶಾಹಿಗಳಿಗೆ ಮಣೆ ಹಾಕಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ತರುವ ಮೂಲಕ ಕಾರ್ಪೋರೇಟ್ ಸಂಸ್ಥೆಗಳಿಗೆ ರೈತರನ್ನು ಸುಲಿಗೆ ಮಾಡುವ ಅವಕಾಶ ನೀಡಿದೆ. ಕಾರ್ಮಿಕ ಕಾಯ್ದೆ ತಿದ್ದುಪಡಿ ಮೂಲಕ ಕಾರ್ಮಿಕರಿಗೆ ಕೊಡಲಿಯೇಟು ನೀಡಿದೆ. ಅತಿವೃಷ್ಟಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೆ ಬಂದ ಸಿಎಂ ಯಡಿಯೂರಪ್ಪ, ರೈತ ವಿರೋಧಿ ನೀತಿಯನ್ನು ಹೊಂದಿದ್ದಾರೆ. ರೈತರಿಗೆ ಮರಣ ಶಾಸನ ಬರೆಯುವ ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರೈತರ ವಿರೋಧದ ನಡುವೆಯು ಜಾರಿಗೆ ತಂದಿದೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಕೊರೊನಾ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ಮಾಡಿದೆ. ಹೀಗಾಗಿ ಬಿಜೆಪಿ ಸರ್ಕಾರ ಈ ಕೂಡಲೇ ಅಧಿಕಾರ ತ್ಯಜಿಸಿ ಜನಾದೇಶ ಪಡೆಯಬೇಕು ಎಂದು ಆಗ್ರಹಿಸಿದರು.