ಬೆಳಗಾವಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದುಗೊಳಿಸಿರುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಪಾಕಿಸ್ತಾನದ ಭಾಷೆ ಒಂದೇ ಆಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಟುವಾಗಿ ಟೀಕಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದಾದ ಬಳಿಕ ವಿಶ್ವ ಸಂಸ್ಥೆಯಲ್ಲಿ ಪಾಕಿಸ್ತಾನ ಮಾಡುತ್ತಿರುವ ವಾದಗಳನ್ನೇ ಕಾಂಗ್ರೆಸ್‌ನವರು ಹೇಳಿಕೆಯಾಗಿ ನೀಡುತ್ತಿದ್ದಾರೆ. ಈ ಇಬ್ಬರ ಹೇಳಿಕೆಗಳು ಭಾರತದ ವಿರುದ್ಧವೇ ಆಗಿದೆ ಎಂದು ಹೇಳಿದ್ದಾರೆ.
ಸಂಸದ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಪಾಕಿಸ್ತಾನದವರು ಆಗಾಗ ಪ್ರಸ್ತಾಪಿಸುತ್ತಿದ್ದಾರೆ. ಈ ವಿಷಯದಲ್ಲಿ ಸೋನಿಯಾ ಗಾಂಧಿ ತಮ್ಮ ನಿಲುವು ಏನೆಂಬುದನ್ನು ತಿಳಿಸಬೇಕು. ಕಾಂಗ್ರೆಸ್ ಮೊದಲಿನಿಂದಲೂ ಇದೇ ಕೆಲಸ ಮಾಡುತ್ತ ಬಂದಿದೆ. ಇನ್ನಾದರೂ ಬುದ್ದಿ ಕಲಿತುಕೊಳ್ಳಬೇಕಾದ ಅಗತ್ಯವಿದೆ ಎಂದರು.
ಕರ್ನಾಟಕ ಸೇರಿದಂತೆ ದೇಶದ 12ಕ್ಕೂ ಹೆಚ್ಚು ರಾಜ್ಯಗಳು ಭೀಕರ ಪ್ರವಾಹಕ್ಕೆ ತುತ್ತಾಗಿವೆ. ಅಧ್ಯಯನ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸುತ್ತಿವೆ. ಹಾನಿಯ ಸಮೀಕ್ಷೆ ಮುಗಿದ ಬಳಿಕ ಕೇಂದ್ರ ಸರ್ಕಾರ ಪರಿಹಾರ ಘೋಷಿಸುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.