ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರ್ಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ರಾಜ್ಯೋತ್ಸವ ಮೆರವಣಿಗೆಗೆ ಸರ್ಕಾರದ ಕೋವಿಡ್ ಮಾರ್ಗಸೂಚಿ ಆಧರಿಸಿ ಅನುಮತಿ ನೀಡಲಾಗುವುದು. ಎಲ್ಲರೂ ಸೇರಿ ಶಾಂತಿಯುತ ಹಾಗೂ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸೋಣ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು. ಸಭೆಯಲ್ಲಿ ನೀಡಲಾದ ಸಲಹೆ-ಸೂಚನೆಗಳ ಆಧಾರದ ಮೇಲೆ ಅರ್ಥಪೂರ್ಣವಾಗಿ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಅವರು ಹೇಳಿದರು.
ಅದ್ಧೂರಿ ರಾಜ್ಯೋತ್ಸವಕ್ಕೆ ಕನ್ನಡಪರ ಸಂಘಟನೆಗಳ ಆಗ್ರಹ:
ಇದೇ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ಈ ಬಾರಿ ರಾಜ್ಯೋತ್ಸವ ಅದ್ಧೂರಿಯಾಗಿ ನಡೆಯಬೇಕು ಎಂದು ಮನವಿ ಮಾಡಿದರು. ಸರ್ಕಾರದ ಎಲ್ಲ ಮಾರ್ಗಸೂಚಿ ಪಾಲಿಸುವ ಮೂಲಕ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ಅವಕಾಶ ಕಲ್ಪಿಸಬೇಕು. ಕಿತ್ತೂರು ಉತ್ಸವ ಸಂದರ್ಭದಲ್ಲಿ ಮುಂಬಯಿ ಕರ್ನಾಟಕವನ್ನು "ಕಿತ್ತೂರು ಕರ್ನಾಟಕ" ಎಂದು ನಾಮಕರಣ ಮಾಡಲು ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.