ಚಿಕ್ಕೋಡಿ: ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲ ನೀಡುತ್ತಿದ್ದಾರೋ, ಇಲ್ಲವೋ ಎಂಬ ಬಗ್ಗೆ ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮಾತನಾಡಿದ ಅವರು, ಈಗಾಗಲೇ ಮೊದಲ ಹಂತದ ಪ್ರಚಾರ ಕಾರ್ಯ ಮುಗಿದಿದೆ. ಬಿಜೆಪಿ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಹೀಗಾಗಿ ಮಹಾಂತೇಶ ಕವಟಗಿಮಠ ಅವರು ಮೊದಲ ಪ್ರಾಶಸ್ತ್ಯದ ಮತವನ್ನು ಪಡೆಯುವ ಮೂಲಕ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರೋನ್ ಪತ್ತೆ: ಆತಂಕ ಬೇಡ, ಸರ್ಕಾರ ಕಟ್ಟೆಚ್ಚರ ವಹಿಸಿದೆ: ಸಚಿವ ಡಾ.ಅಶ್ವತ್ಥನಾರಾಯಣ
ಬಿಜೆಪಿ ರಾಷ್ಟ್ರೀಯ ಪಕ್ಷ. ಎಲ್ಲವನ್ನೂ ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಯಾರು? ಯಾರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಪಕ್ಷ ಅವಲೋಕಿಸುತ್ತಿದೆ. ರಮೇಶ್ ಜಾರಕಿಹೊಳಿ ಕೂಡ ಮೊದಲ ಪ್ರಾಶಸ್ತ್ಯದ ಮತಗಳನ್ನು ಮಹಾಂತೇಶ ಕವಟಗಿಮಠ ಅವರಿಗೆ ಕೊಡಬೇಕು ಎಂದು ಹೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಈ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಮುಂದಿನ ಚುನಾವಣೆ ಬಳಿಕ ಮುರುಗೇಶ ನಿರಾಣಿ ಅವರು ಸಿಎಂ ಆಗಬಹುದು ಅಂದಿದ್ದಾರೆ. ಈಗಿರುವ ಮುಖ್ಯಮಂತ್ರಿಗಳು ಬದಲಾಗ್ತಾರೆ ಎಂಬದನ್ನು ಅವರ ಮಾತಿನಲ್ಲಿ ನಾನು ಕಂಡಿಲ್ಲ. ಅದು ಅವರ ವೈಯಕ್ತಿಕ ವಿಚಾರ ಎಂದರು.