ಬೆಳಗಾವಿ: ಇಂದು ರೈತರ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನಡೆಸಿದ ಸಭೆ ವಿಫಲವಾಗಿದೆ. ಈ ವೇಳೆ ಸಚಿವರ ಕಾರು ತಡೆದು ರೈತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರೈತರ ಜೊತೆಗಿನ ಸಭೆಯಲ್ಲಿ ಸಚಿವ ಜಗದೀಶ್ ಶೆಟ್ಟರ್, ಪ್ರವಾಹದ ಕುರಿತಾಗಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬುದರ ಕುರಿತು ಹೇಳಿದ್ರು. ಈ ಸಂದರ್ಭದಲ್ಲಿ ರೈತರು ಹಾಗೂ ಸಚಿವರ ಮಧ್ಯೆ ವಾಗ್ವಾದ ನಡೆಯಿತು. ಸರ್ಕಾರ ಕೇವಲ ಆಶ್ವಾಸನೆ ನೀಡುತ್ತಾ, ರೈತರಿಗೆ ಮೋಸ ಮಾಡುತ್ತಿದೆ ಎಂದು ರೈತ ಮುಖಂಡರು ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.
ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಮಾತನಾಡಿದ ಸಚಿವ ಶೆಟ್ಟರ್, ಪ್ರವಾಹಕ್ಕೆ ಒಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದ್ದು, ಈಗಾಗಲೇ ಜಿಲ್ಲಾಧಿಕಾರಿ ಅಕೌಂಟ್ಗೆ ಹಣ ವರ್ಗಾವಣೆ ಮಾಡಲಾಗಿದೆ. ಅವಶ್ಯಕತೆ ಇದ್ದಲ್ಲಿ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ ಎಂದರು.
ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೈತ ಮುಖಂಡರು, ಸರ್ಕಾರದ ಬಳಿ ಹಣ ಇಲ್ಲ, ಇನ್ನೂ ರೈತರು ಕಳೆದುಕೊಂಡ ಬೆಳೆಗಳಿಗೆ ಪರಿಹಾರ ಘೋಷಣೆ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ನೆರೆ ಪರಿಹಾರದ ಹಣ ತರುವಲ್ಲಿ ರಾಜ್ಯ ಬಿಜೆಪಿ ನಾಯಕರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.