ಬೆಳಗಾವಿ: ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಂತೆ ಕರ್ನಾಟಕ ಸರ್ಕಾರ ಕೂಡ ಹಿಂಪಡೆಯಬೇಕೆಂದು ಒತ್ತಾಯಿಸಿ ನಾಳೆ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ಸಂದರ್ಭದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಅದರಂತೆ ಕರ್ನಾಟಕದಲ್ಲೂ ಕೂಡ ಬಿಜೆಪಿ ಸರ್ಕಾರ ಯಥಾವತ್ತಾಗಿ ಸುಗ್ರೀವಾಜ್ಞೆ ಹೊರಡಿಸಿ ಕೃಷಿ ಮಸೂದೆಯನ್ನು ಜಾರಿಗೆ ತಂದಿತ್ತು. ಇದೀಗ ರೈತರ ಒಂದು ವರ್ಷದ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಅದರಂತೆ ಕರ್ನಾಟಕ ಸರ್ಕಾರ ಕೂಡ ಬೆಳಗಾವಿ ಅಧಿವೇಶನದಲ್ಲಿ ಹಿಂಪಡೆಯುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಇದೀಗ ಬಿಜೆಪಿ ನಡವಳಿಕೆ ಬದಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಚಿವ ಮಾಧುಸ್ವಾಮಿ ಅವರು ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ ಎಂದರು.
ಭಾರತ ಸರ್ಕಾರ ಕೃಷಿ ಮಸೂದೆಯನ್ನು ವಾಪಸ್ ಪಡೆದರೆ, ಕರ್ನಾಟಕ ಸರ್ಕಾರ ವಾಪಸ್ ಪಡೆಯಬೇಕು ಎಂಬ ಕಾನೂನು ಇಲ್ಲ ಅಂತಾ ರೈತರಿಗೆ ಕಾನೂನಿನ ತಿಳುವಳಿಕೆಯನ್ನು ಮಾಧುಸ್ವಾಮಿ ಮಾಡುತ್ತಿದ್ದಾರೆ. ಈ ಮೊದಲು ಬಿಜೆಪಿ, ರೈತರ ಸರ್ಕಾರ ಅಂದುಕೊಂಡು ಇದೀಗ ರೈತರ ಹಿತಾಸಕ್ತಿಯನ್ನು ಮರೆತಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯವಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಒಂದು ವೇಳೆ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ರೆ ಇಡೀ ರಾಜ್ಯದಲ್ಲಿ ರೈತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಇದರ ಜೊತೆಗೆ ದೆಹಲಿ ಮಾದರಿಯಲ್ಲಿ ಕರ್ನಾಟಕದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಬಿಜೆಪಿ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಹೇಳಿದರು.