ಬೆಳಗಾವಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಡಿಸೆಂಬರ್ 21 ರಂದು ಬೆಳಗ್ಗೆ 9 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್, ಕೆಪಿಸಿಸಿ ಅಧ್ಯಕ್ಷರಾದ ಈಶ್ವರ ಕಂಡ್ರೆ, ರಾಮಲಿಂಗ ರೆಡ್ಡಿ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಹಾಗೂ ಧ್ರುವನಾರಾಯಣ್, ಮಾಜಿ ಡಿಸಿಎಂ ಜಿ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಇ.ತುಕಾರಾಂ ಎಲ್ಲಾ ಶಾಸಕರು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಿ ಅಧಿವೇಶನದಲ್ಲಿ ಚರ್ಚೆಯಾಗುವ ವಿಚಾರಗಳ ಕುರಿತು ಸಲಹೆ ಸೂಚನೆ ನೀಡುವಂತೆ ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ವಿಪ್ ಜಾರಿ
ಮುಂದಿನ ವಾರ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿ ಅನುಮೋದನೆ ಪಡೆಯಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿರುವ ಕಾಂಗ್ರೆಸ್ ಈ ಸಂದರ್ಭ ಪ್ರಬಲ ಪ್ರತಿರೋಧ ನೀಡಲು ನಿರ್ಧರಿಸಿದೆ. ಹೀಗಾಗಿ ಮುಂದಿನ ಸೋಮವಾರದಿಂದ ಶುಕ್ರವಾರದವರೆಗೆ ಅಂದರೆ, ಡಿಸೆಂಬರ್ 20 ರಿಂದ 24 ರವರೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳಲ್ಲಿ ಕಡ್ಡಾಯವಾಗಿ ಉಪಸ್ಥಿತರಿರುವಂತೆ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಿದೆ.
ಶಾಸಕರಿಗೆ ನೀಡಿರುವ ವಿಪ್ನಲ್ಲಿ, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 15ನೇ ವಿಧಾನಸಭೆಯ 11ನೇ ಅಧಿವೇಶನವು ನಡೆಯುತ್ತಿದ್ದು, ಸದನದಲ್ಲಿ ಸಾರ್ವಜನಿಕರ ಅತೀ ಮಹತ್ವದ ವಿಷಯಗಳು ಮುಕ್ತಾಯವಾಗುವವರೆಗೆ ಕಾರ್ಯಕಲಾಪಗಳಲ್ಲಿ ಭಾಗವಹಿಸಬೇಕು ಎಂದು ವಿಪ್ ಜಾರಿ ಮಾಡಲಾಗಿದೆ. ಈ ದಿನಗಳಲ್ಲಿ ಕಲಾಪ ಆರಂಭದಿಂದ ಅಂತ್ಯದದವರೆಗೂ ಕಡ್ಡಾಯವಾಗಿ ಸದಸ್ಯರು ಹಾಜರಿರುವಂತೆ ಸೂಚಿಸಲಾಗಿದೆ.