ಬೆಳಗಾವಿ: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಮನೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ. ಸುರೇಶ್ ಅಂಗಡಿ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅಂಗಡಿಯವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಬಳಿಕ ಅಲ್ಲಿಯೇ ಕುಳಿತಿದ್ದ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಸೇರಿ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಮೂಲಕ ಧೈರ್ಯ ತುಂಬಿದರು.
ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಮಹಾಂತೇಶ ದೊಡ್ಡಗೌಡರ ಸಾಥ್ ನೀಡಿದರು.
ಬಳಿಕ ಮಾತನಾಡಿದ ಲಕ್ಷ್ಮಣ ಸವದಿ, ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಸುರೇಶ್ ಅಂಗಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಬಂದಿದ್ದಾರೆ. ಅಂಗಡಿ ಕುಟುಂಬಸ್ಥರಿಗೆ ನಾವು ಧೈರ್ಯವನ್ನು ತುಂಬಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.