ಚಿಕ್ಕಬಳ್ಳಾಪುರ : ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ವಿಚಾರದಲ್ಲಿ ಸರ್ಕಾರ ಗಂಭೀರವಾಗಿದೆ. ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಸುಧಾಕರ್ ಜಿಲ್ಲೆಯ ಗೌರಿಬಿದನೂರಿನಲ್ಲಿ ಕನ್ನಡ ಪರ ಸಂಘಟನೆಗಳಿಗೆ ಭರವಸೆ ನೀಡಿದರು.
ಮಳೆಹಾನಿ ಪರಿಹಾರ ವಿತರಣೆ ಕಾರ್ಯಕ್ರಮದ ಅಂಗವಾಗಿ ಇಂದು ಗೌರಿಬಿದನೂರು ಕ್ಷೇತ್ರಕ್ಕೆ ಸಚಿವ ಸುಧಾಕರ್ ಭೇಟಿ ನೀಡಿದ್ದರು. ಈ ವೇಳೆ ಸಚಿವರ ವಾಹನ ಅಡ್ಡಗಟ್ಟಿದ ಜಯ ಕರ್ನಾಟಕ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘಟನೆ, ಬೆಳಗಾವಿಯಲ್ಲಿ ಎಮ್ಇಎಸ್ ಪುಂಡಾಟಿಕೆಯಿಂದ ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಹಾಗೂ ಎಮ್ಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಮನವಿ ಸಲ್ಲಿಸಿದರು.
ಬೆಳಗಾವಿ ಎಮ್ಇಎಸ್ ಗಲಭೆ ಸುಧಾಕರ್ ಹೇಳಿಕೆ : ಮನವಿ ಸ್ವೀಕರಿಸಿದ ಸಚಿವರು, ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದೇವೆ. ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ಹಾನಿಗೊಳಿಸಿದ ಕಿಡಿಗೇಡಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಈ ವಿಚಾರವನ್ನು ಸರ್ಕಾರ ತುಂಬಾ ಗಂಭೀರವಾಗಿ ತಗೆದುಕೊಂಡಿದೆ ಎಂದು ತಿಳಿಸಿದರು.