ಬೆಳಗಾವಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರೈತರಿಗೆ ಪರಿಹಾರ ನೀಡಲು ಹಣ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿದ ಶಾಸಕ ಅಭಯ್ ಪಾಟೀಲ್ ಅಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಬೆಳಗಾವಿ ತಾಲೂಕು ಹಲಗಾ ಮಚ್ಚೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ವಶಪಡಿಸಿಕೊಂಡ ಭೂಮಿಗೆ ಸಂಬಂಧಿಸಿ, ಸರ್ಕಾರ ಪರಿಹಾರದ ಹಣ ಬಿಡುಗಡೆ ಮಾಡಿದೆ. ಆದರೆ, ಸಂಬಂಧಿಸಿದ ಅಧಿಕಾರಿಗಳು ಮಾತ್ರ ಪರಿಹಾರ ನೀಡಲು ಲಂಚ ಕೇಳುತ್ತಿದ್ದಾರೆ ಎಂಬ ಆರೋಪವಿತ್ತು. ಹೀಗಾಗಿ ಶಾಸಕ ಪಾಟೀಲ್ ಇಲ್ಲಿನ ಶಿವಬಸವ ನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು.
ಜೊತೆಗೆ ರೈತರಿಂದ ವಸೂಲಿ ಮಾಡಿದ ಹಣವನ್ನು ಕೂಡಲೇ ವಾಪಸ್ ನೀಡುವಂತೆಯೂ ತಾಕೀತು ಮಾಡಿದರು. ಈ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಟ್ಟಿ ಹಾಕಲು ಹಗ್ಗ ತಂದಿದ್ದ ರೈತರನ್ನು ಸಮಾಧಾನಪಡಿಸಿದರು.