ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಬಿಜೆಪಿ ಶಾಸಕ ಅನಿಲ ಬೆನಕೆ ಸವಾಲು ಹಾಕಿದ್ದಾರೆ.
ಕೇಂದ್ರ ಸರ್ಕಾರ ಸುರೇಶ್ ಅಂಗಡಿಯವರನ್ನ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡಲಾಯಿತು ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಬೆನಕೆ, ಸುರೇಶ್ ಅಂಗಡಿ ಕೊರೊನಾದಿಂದ ಮೃತಪಟ್ಟು ಒಂದು ವರ್ಷವಾಯಿತು. ಒಂದು ವರ್ಷದಿಂದ ಇವರು ಯಾಕೆ ಬಾಯಿ ಮುಚ್ಚಿಕೊಂಡಿದ್ರು. ನಮ್ಮ ಹಿರಿಯ ನಾಯಕರ ಬಗ್ಗೆ ನಮಗೆ ಗೌರವಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಸಂಬಂಧಿಕರ ಕೈಗೆ ಹಸ್ತಾಂತರಿಸಬಾರದೆಂಬ ನಿಯಮವಿತ್ತು. ಒಂದು ವೇಳೆ ನಾವು ಮೃತದೇಹವನ್ನು ಅಂದು ಕುಟುಂಬಕ್ಕೆ ಹಸ್ತಾಂತರಿಸಿದ್ದರೆ, ಇವರೇ ಉಲ್ಟಾ ಮಾತನಾಡುತ್ತಿದ್ರು ಎಂದು ವಾಗ್ದಾಳಿ ನಡೆಸಿದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಆದಾಗ ಎರಡು ವರ್ಷ ನೀವು ಏಕೆ ಕೆಲಸ ಮಾಡಲಿಲ್ಲ. ನಾವು ಶಾಸಕರಾಗಿ ಆಯ್ಕೆಯಾದ ಮೇಲೆ ಕೆಲಸ ಶುರು ಮಾಡಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಶಾಸಕರು, ಸಂಸದರು ಯಾರ್ ಬೇಕಾದ್ರು ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಶಾಸಕ ಅನಿಲ್ ಬೆನಕೆ ಓಪನ್ ಚಾಲೆಂಜ್ ಹಾಕಿದರು.
ಬಿಜೆಪಿ 45ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ಶಶಿಕಲಾ ಜೊಲ್ಲೆ
ಬಿಜೆಪಿ ಅಜೆಂಡಾದಂತೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 45ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ಸ್ವತ್ತಾಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳ ಬಳಿಕ ಬಿಜೆಪಿ ಚಿಹ್ನೆ ಮೇಲೆ ಪಾಲಿಕೆ ಚುನಾವಣೆ ಎದುರಿಸುತ್ತಿದ್ದು, ನಿನ್ನೆ ಬೆಳಗ್ಗೆಯಿಂದ 6 ವಾರ್ಡ್ ಗಳಲ್ಲಿ ಮತಯಾಚನೆ ಮಾಡುತ್ತಿದ್ದೇನೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ಸಿಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಶಾಸಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಶಾಸಕರು ಮಾಡಿರುವ ಅಭಿವೃದ್ಧಿ ಕೆಲಸಗಳು ಪಾಲಿಕೆ ಚುನಾವಣೆಯಲ್ಲಿ ಸಹಕಾರಿ ಆಗಲಿದೆ ಎಂದರು.
ಬೆಳಗಾವಿ ಮಹಾನಗರ ಪಾಲಿಕೆಗೆ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ನಮ್ಮ ಮತ ಕೊಡುತ್ತೇವೆ ಎಂದು ಕ್ಷೇತ್ರದ ಜನರು ಮಾತನಾಡಿಕೊಳ್ಳುತ್ತಿದ್ದಾರೆ.