ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸದೇ ದೇವಸ್ಥಾನ ಹಾಗೂ ಮನೆಗಳಲ್ಲಿಯೇ ಪ್ರತಿಷ್ಠಾಪಿಸಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು, ದೇವಸ್ಥಾನಗಳ ಮಂಡಳಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಈ ಕೆಳಕಂಡ ಎಲ್ಲ ಮಾರ್ಗಸೂಚಿಗಳನ್ನು ಪರಿಪಾಲಿಸಬೇಕು. ದೇವಸ್ಥಾನಗಳ ಮಂಡಳಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಗಣೇಶ ಉತ್ಸವ ಆಚರಿಸಲು ಸಂಬಂಧಪಟ್ಟ ಇಲಾಖೆಗಳ ಪೂರ್ವಾನುಮತಿ ಕಡ್ಡಾಯವಾಗಿ ಪಡೆಯಬೇಕು. ಮನೆಯಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಯ ಎತ್ತರ ಗರಿಷ್ಠ 2 ಅಡಿ (ಪೀಠ ಸಹಿತ) ಮೀರದಂತೆ ಹಾಗೂ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳ ಎತ್ತರ ಗರಿಷ್ಠ 4 ಅಡಿ (ಪೀಠ ಸಹಿತ) ಮೀರತಕ್ಕದ್ದಲ್ಲ ಹಾಗೂ ಕಡ್ಡಾಯವಾಗಿ ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು.
ಅದೇ ರೀತಿ ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಅವರ ಮನೆ ಆವರಣದಲ್ಲಿಯೇ ನಿಮಜ್ಜನ ಮಾಡಲು ಎಲ್ಲ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಒಂದು ವೇಳೆ ಈ ವ್ಯವಸ್ಥೆಯನ್ನು ಮಾಡಿಕೊಳ್ಳಲು ಆಗದೇ ಇದ್ದ ಸಂದರ್ಭದಲ್ಲಿ ಮಹಾನಗರ ಪಾಲಿಕೆ, ಬೆಳಗಾವಿ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅವರು ತಯಾರಿಸಿದ ಮೊಬೈಲ್ ಟ್ಯಾಂಕಗಳಲ್ಲಿ ನಿಮಜ್ಜನ ನೆರವೇರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಸಿದ್ದಾರೆ.