ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಗಾಳಿಗೆ ತೂರಿದ್ದಾರೆ.
ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟ ಪ್ರಾರಂಭವಾಗಿದ್ದು, ನಿನ್ನೆ 47,827 ಕೊರೊನಾ ಕೇಸ್ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 202 ಜನರು ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದ್ದಾರೆ. ಇದಲ್ಲದೇ, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿವ ಹಿನ್ನೆಲೆ ರಾಜ್ಯ ಸರ್ಕಾರ ಪಬ್, ಬಾರ್, ಜಿಮ್, ರೆಸ್ಟೋರೆಂಟ್, ಮಾಲ್ ಸೇರಿದಂತೆ ಚಿತ್ರಮಂದಿರಗಳಲ್ಲಿ 50 - 50 ಕೊರೊನಾ ಟಫ್ ನಿಯಮ ಜಾರಿ ಮಾಡಿದೆ.
ಬೆಳಗಾವಿಯಲ್ಲಿ ನಿನ್ನೆ 35 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ 272 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಆದರೆ, ಜಿಲ್ಲೆಯ ಎಪಿಎಂಸಿ ಮಾರುಕಟ್ಟೆ ಬಳಿ ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಈಗಲೇ ಸಾರ್ವಜನಿಕರು ಎಚ್ಚೆತ್ತುಕೊಳ್ಳದಿದ್ದರೆ ಕುಂದಾನಗರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಿದ್ದಾರೆ ತಜ್ಞರು.