ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ತಟಸ್ಥವಾಗಿ ಉಳಿಯಲು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಗೋಕಾಕ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೆಂಬಲಿಗರೊಂದಿಗೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವೂ ಪ್ರಚಾರ ಮಾಡದೇ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸದೇ ತಟಸ್ಥವಾಗಿ ಉಳಿಯಲಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಮುಂದಿನ ನಿರ್ಧಾರ ಪ್ರಟಿಸುವುದಾಗಿ ಕಾರ್ಯಕರ್ತರ ಮುಂದೆ ತಿಳಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ರಮೇಶ್ ಜಾರಕಿಹೊಳಿ ಅವರ ಈ ದಿಢೀರ್ ನಡೆಯಿಂದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಿನ್ನಡೆ ಆಗಲಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಜತೆಗೆ ರಮೇಶ್ ಜಾರಕಿಹೊಳಿ ಅಂತರ ಕಾಯ್ದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ಗೋಕಾಕದಲ್ಲಿ ಸಭೆ ನಡೆಸಿದ್ದರು. ಚುನಾವಣೆಯಲ್ಲಿ ಗೋಕಾಕ್ ಉಸ್ತುವಾರಿಯನ್ನು ಉದ್ಯಮಿ ಲಖನ್ ಜಾರಕಿಹೊಳಿ ಅವರಿಗೆ ವಹಿಸಲಾಗಿತ್ತು. ಈ ಎಲ್ಲ ಬೆಳವಣಿಗೆ ಮಧ್ಯೆ ರಮೇಶ್ ಜಾರಕಿಹೊಳಿ ಅವರು ಇಂದು ಬೆಂಬಲಿಗರ ಸಭೆ ನಡೆಸಿ ತಟಸ್ಥವಾಗಿ ಉಳಿಯುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.