ಬೆಳಗಾವಿ : ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಹೊಸದಾಗಿ ನಿರ್ಮಿಸುವ 35 ಕೋಟಿ ರೂ. ವೆಚ್ಚದ ಪ್ರಸ್ತಾವಕ್ಕೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಪ್ರವಾಸಿ ಮಂದಿರಲ್ಲಿ ಜಲಜೀವನ ಮಿಷನ್, ಬಹುಗ್ರಾಮ ಕುಡಿಯುವ ನೀರು, ಕೋವಿಡ್ ನಿಯಂತ್ರಣ ಮತ್ತಿತರ ವಿಷಯಗಳ ಕುರಿತು ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 1980ರಲ್ಲಿ 0.60 ಟಿಎಂಸಿ ಸಾಮರ್ಥ್ಯದ ಕಲ್ಲೋಳ ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ. 40 ವರ್ಷ ಹಳೆಯದಾಗಿರುವ ಬ್ಯಾರೇಜ್ನಲ್ಲಿ ನೀರು ಸಂಗ್ರಹವಾಗುತ್ತಿಲ್ಲ.
ಅದಕ್ಕಾಗಿ 35 ಕೋಟಿ ರೂ. ವೆಚ್ಚದಲ್ಲಿ ಹೊಸ ಬ್ಯಾರೇಜ್ ನಿರ್ಮಾಣದ ಅಗತ್ಯವಿದೆ. ಸರಕಾರದ ಮಟ್ಟದಲ್ಲಿ ಪ್ರಸ್ತಾವ ಬಾಕಿ ಉಳಿದಿದೆ. ಹೀಗಾಗಿ, ಕೂಡಲೇ 35 ಕೋಟಿ ರೂ. ವೆಚ್ಚದ ಕಲ್ಲೋಳ ಬ್ಯಾರೇಜ್ ನಿರ್ಮಾಣ ಪ್ರಸ್ತಾವಕ್ಕೆ ಮಂಜೂರಾತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಲ ಜೀವನ ಮಿಷನ್ ಕಾಮಗಾರಿ ಅಕ್ಟೋಬರ್‌ನಿಂದ ಆರಂಭ : ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರಕಾರ ಅನುದಾನ ನೀಡಿದೆ. ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅಕ್ಟೋಬರ್ ಮೊದಲ ವಾರದ ವೇಳೆಗೆ ಎಲ್ಲ ಪೂರ್ವಸಿದ್ಧತೆ ಕೈಗೊಂಡು ನಂತರ ಕಾಮಗಾರಿಗೆ ಚಾಲನೆ ನೀಡಬೇಕು.
ಶುದ್ಧ ಕುಡಿಯುವ ನೀರು ಒದಗಿಸಲು 2100 ಕೋಟಿ ಮಂಜೂರು : ಈ ಮಿಷನ್ ಮೂಲಕ ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಜಿಲ್ಲೆಯ 8.52 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲು ಕೇಂದ್ರ ಸರಕಾರ 2100 ಕೋಟಿ ಮಂಜೂರು ಮಾಡಿದೆ. 918 ಜನವಸತಿಗಳಿಗೆ ನೂರಕ್ಕೆ ನೂರರಷ್ಟು ನೀರು ಡಿಪಿಆರ್ ಆಗಿದೆ. ಅಕ್ಟೋಬರ್ನಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮನೆಗಳಿಗೆ ನದಿ ಮೇಲ್ಮಟ್ಟದ ನೀರು ಸರಬರಾಜು : ಹೊಸ ಕೊಳವೆಬಾವಿ ಕೊರೆಯುವ ಬದಲು ಇರುವ ಕೊಳವೆಬಾವಿಗಳ ದುರಸ್ತಿ, ಮರುಪೂರಣಕ್ಕೆ ಆದ್ಯತೆ ನೀಡಬೇಕು. ನದಿಗಳ ಮೇಲ್ಮಟ್ಟದ ನೀರು ಬಳಕೆ ಮಾಡಿಕೊಂಡು ಜಲಜೀವನ ಮಿಷನ್ ಯೋಜನೆ ಮೂಲಕ ಎಲ್ಲ ಗ್ರಾಮಗಳ ಮನೆಗಳಿಗೆ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. 1.91 ಲಕ್ಷ ಮನೆಗಳಿಗೆ ನಲ್ಲಿಯ ಮೂಲಕ ನೀರು ಪೂರೈಸಲಾಗುತ್ತಿದೆ. ಉಳಿದ ಮನೆಗಳಿಗೆ ಜಲಜೀವನ ಮಿಷನ್ ಯೋಜನೆಯಡಿ ಮನೆಗಳಿಗೆ ನೀರು ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಬೀಜ-ಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ : ಜಿಲ್ಲೆಯಲ್ಲಿ ಬಿತ್ತನೆ ಉತ್ತಮವಾಗಿದೆ. ಆದ್ದರಿಂದ ಬೀಜ-ಗೊಬ್ಬರ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ತಾಯಂದಿರಿಗೂ ಲಸಿಕೆ : ಸಂಭವನೀಯ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲಿದರೆ ಮಕ್ಕಳಿಗೆ ಚಿಕಿತ್ಸೆ ನೀಡುವಾಗ ತಾಯಂದಿರಿಗೂ ಅವಕಾಶ ನೀಡಬೇಕಾಗುತ್ತದೆ. ಆದ್ದರಿಂದ ತಾಯಂದಿರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಅಗತ್ಯವಿದೆ. ಹೀಗಾಗಿ, ಸೋಂಕು ತಗುಲಿದ ಮಕ್ಕಳ ಜೊತೆಗೆ ಇರಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.