ಅಥಣಿ : ಬಿಜೆಪಿ ಸರ್ಕಾರ ವಿಪಕ್ಷಗಳ ವಿರೋಧದ ನಡುವೆಯೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಇದರಿಂದಾಗಿ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಅಥಣಿ ಪಟ್ಟಣದ ಪುರಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯಿಂದ ಭಯ ಬೇಡ, ಈ ಕಾಯ್ದೆ ಒಂದೇ ಸಮಾಜಕ್ಕೆ ಸೀಮಿತವಾಗಿಲ್ಲ. ಅಲ್ಪಸಂಖ್ಯಾತರನ್ನು ಗುರಿ ಮಾಡಿ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಆದರೂ ಎಲ್ಲರಿಗೂ ಈ ಕಾಯ್ದೆ ಅನ್ವಯವಾಗುತ್ತದೆ ಎಂದು ತಿಳಿಸಿದರು.
ಮಹಾರಾಷ್ಟ್ರ ರಾಜ್ಯದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡುತ್ತಿದ್ದಾರೆ. ಅವರ ರಾಜ್ಯದಲ್ಲಿ ದುಷ್ಕೃತ್ಯ ಮಾಡುತ್ತಿರುವುದರಿಂದ ನಾವು ಏನೂ ಮಾಡಲು ಆಗುವುದಿಲ್ಲ. ನಮ್ಮ ರಾಜ್ಯದಲ್ಲಿ ಆಗಿರುವ ಘಟನೆಗೆ ಕಾನೂನು ಕ್ರಮಕೈಗೊಳ್ಳಲಾಗಿದೆ. ನಾವು ಕನ್ನಡದ ಪರವಾಗಿದ್ದೇವೆ. ಸರ್ಕಾರಗಳು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ತಿಳಿಸಿದರು.