ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲವು ಗ್ರಾಮಗಳಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ, ಕೃಷ್ಣಾ ನದಿ ನೀರು ಹೋರಾಟ ಸಮಿತಿ ಮತ್ತು ರೈತ ಹಿತರಕ್ಷಣಾ ಜಾಗೃತಿ ಸಮಿತಿಯ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಕ್ಷೇತ್ರದಲ್ಲೇ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲ. ಇದರಿಂದ ಮಕ್ಕಳು ತರಗತಿಗಳಿಗೆ ಹೋಗಲಾಗದೇ ಶಾಲಾ-ಕಾಲೇಜುಗಳನ್ನು ತೊರೆಯುವ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಥಣಿ ಹಾಗೂ ಕಾಗವಾಡ ತಾಲೂಕಿನ 109ಕ್ಕೂ ಅಧಿಕ ಗ್ರಾಮಗಳಿಗೆ ಸರಿಯಾದ ಬಸ್ ಸೌಲಭ್ಯವಿಲ್ಲ. ವಿದ್ಯಾಭ್ಯಾಸಕ್ಕಾಗಿ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಾರದೊಳಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬಹುತೇಕ ಕಡೆ ಸಮಯಕ್ಕೆ ಸರಿಯಾಗಿ ಬಸ್ ಬರುತ್ತಿಲ್ಲ. ಹಲವೆಡೆ ಬಸ್ ಸಂಚಾರ ವಿರಳ. ಆದ್ದರಿಂದ ಹೆಚ್ಚುವರಿ ಬಸ್ಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಮೂಲಕ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತರತಿಗಳಿಗೆ ಹೋಗುವಂತಾಗಬೇಕು. ಸರ್ಕಾರ ಶೀಘ್ರ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ಮಾಡುತ್ತೇವೆ ಎಂದು ಸಮಾಜ ಸೇವಕ ಬಸನಗೌಡ ಪಾಟೀಲ್ ಎಚ್ಚರಿಸಿದರು.