ಬೆಳಗಾವಿ: ಪ್ರವಾಹದಿಂದ ಮನೆ, ಬೆಳೆ ಕಳೆದುಕೊಂಡು ಜನರು ಸಂಕಷ್ಟದಲ್ಲಿದ್ದ, ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಸರ್ಕಾರ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವವರಿಗೆ 5 ಲಕ್ಷ ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ನಡೆದ ಪರಿಹಾರ ವಿತರಣೆ- ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾದರಿಯನ್ನು ಅಧ್ಯಯನ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧ್ಯಯನ ವರದಿಯ ಬಳಿಕ ಸರ್ಕಾರದ ಆರ್ಥಿಕ ಸ್ಥಿತಿ ಆಧರಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.
ವಿವಿಧ ಹಂತದಲ್ಲಿ ಪರಿಹಾರ ವಿತರಣೆ ಕಾರ್ಯ ಈಗಾಗಲೇ ನಡೆದಿದೆ. ಒಂದೇ ಮನೆಯಲ್ಲಿ ವಾಸಿಸುವ ಎರಡೂ ಕುಟುಂಬಗಳಿಗೂ ಪ್ರತ್ಯೇಕ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರು ಒಪ್ಪಿದರೆ ಶಾಶ್ವತ ಸ್ಥಳಾಂತರಕ್ಕೆ ನಮ್ಮ ಸರ್ಕಾರ ಸಿದ್ಧವಿದೆ. ಕೆಲವು ವರ್ಷಗಳ ಹಿಂದೆ ಸ್ಥಳಾಂತರ ಮಾಡಿದ ಗ್ರಾಮಗಳಿಗೆ ಜನರು ಹೋಗಲಿಲ್ಲ. ಗ್ರಾಮಸ್ಥರು ಒಟ್ಟಾಗಿ ಸಂಪೂರ್ಣ ಗ್ರಾಮ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು,16 ಗ್ರಾಮಗಳಿಗೆ ನೀರು ಪೂರೈಸುವ 89 ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಹದಿನೈದು ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.