ಬೆಳಗಾವಿ: ಮೈತ್ರಿ ಸರ್ಕಾರ ಉರುಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿ ಅನರ್ಹರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಮಾಡಲು ಮುಂದಾಗಿದ್ದು, ಇದಕ್ಕೆ ಸಹೋದರ ಸತೀಶ್ ಜಾರಕಿಹೊಳಿ ಸೆಡ್ಡು ಹೊಡೆದಿದ್ದಾರೆ. ಉಪ ಚುನಾವಣೆ ಘೋಷಣೆಗೂ ಮುನ್ನವೇ ಜಾರಕಿಹೊಳಿ ಸಹೋದರರು ದ್ವೇಷದ ರಾಜಕಾರಣಕ್ಕೆ ಇಳಿದಿದ್ದಾರೆ ಎನ್ನಲಾಗಿದೆ.
ಮೂರು ದಿನಗಳ ಹಿಂದೆ ತಾಲೂಕು ಆಡಳಿತದ ಜತೆಗೆ ಸಭೆ ನಡೆಸಿದ ಅನರ್ಹ ಶಾಸಕ ರಮೇಶ ಜಾರಕಿಹೊಳಿ, ನನ್ನ ಅಳಿಯ ಅಂಬಿರಾವ್ ಪಾಟೀಲ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ಖಡಕ್ ಎಚ್ಚರಿಕೆ ಕೊಟ್ಟಿದ್ದರು. ರಮೇಶ್ ಜಾರಕಿಹೊಳಿ ಅವರ ಈ ನಿರ್ಧಾರ ಸತೀಶ್ ಜಾರಕಿಹೊಳಿ ಅವರನ್ನು ಕೆರಳಿಸಿದ್ದು, ಈ ಕುರಿತು ಪ್ರಕಟಣೆ ಹೊರಡಿಸಿರುವ ಸತೀಶ , ಅಂಬಿರಾವ್ ಪಾಟೀಲ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಕೆಲಸ ಮಾಡುವುದು ಕಾನೂನು ಬಾಹಿರ. ಅಧಿಕಾರಿಗಳು ಸಾರ್ವಜನಿಕರ ಪರವಾಗಿ ಹಾಗೂ ಕಾನೂನು ಪ್ರಕಾರ ಕೆಲಸ ಮಾಡಬೇಕು. ಅಂಬಿರಾವ್ ಮಾತು ಕೇಳಿಕೊಂಡು ಆಡಳಿತ ನಡೆಸಿದರೆ ಗೋಕಾಕಿನಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

ಗೋಕಾಕ್ ಕ್ಷೇತ್ರದ ಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಘಟನೆ ನಡೆದರೂ ಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೂರು ದಾಖಲಿಸಲಾಗುತ್ತಿದೆ. ಯಾರದೋ ಮಾತು ಕೇಳಿಕೊಂಡು ಪೊಲೀಸರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳ ವಿಚಾರಣೆಗೆ ಬೇರೆ ಅಧಿಕಾರಿಗಳನ್ನು ನೇಮಿಸಬೇಕು ಹಾಗೂ ಈ ಬಗ್ಗೆ ಗಮನ ಹರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಸತೀಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ.

ಇನ್ನು ಉಪ ಚುನಾವಣೆಗೆ ಮುನ್ನವೇ ಸತೀಶ್ ಜಾರಕಿಹೊಳಿ ವಾರದಲ್ಲಿ ಮೂರು ದಿನ ಗೋಕಾಕ್ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಅಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೇ ಸಂಘಟಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಕಾರಣಕ್ಕಾಗಿಯೇ ರಮೇಶ್ ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.