ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ಹುಲಿ ಕಾಣಿಸಿಕೊಂಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಡಂಬಳಿ ಎಂಬುವರ ತೋಟದಲ್ಲಿ ಶನಿವಾರ ಸಂಜೆ ವೇಳೆಗೆ ಹುಲಿ ಕಾಣಿಸಿಕೊಂಡಿದೆ ಎನ್ನಲಾಗ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಸ್ಥಳೀಯರು ಅದರ ಚಲನವಲನವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಈ ಕುರಿತು ಅಥಣಿ ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ್ ಗಾಣಿಗೇರ್ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
'ಈಟಿವಿ ಭಾರತ'ದೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಶಾಂತ್ ಗಾಣಿಗೇರ್, ಪ್ರಾಣಿಯ ಹೆಜ್ಜೆ ಗುರುತು, ಚಲನವಲನ ಗಮನಿಸಿದಾಗ ಅದು ಕತ್ತೆಕಿರುಬ ಎಂದು ಅಂದಾಜಿಸಲಾಗಿದೆ. ನಮ್ಮ ಭಾಗಕ್ಕೆ ಹುಲಿ ಬರುವುದು ಕಡಿಮೆ. ನಾವು ಶೋಧ ಕಾರ್ಯ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.