ಬೆಳಗಾವಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಹಾಗೂ ಗ್ರಾಮ ಪಂಚಾಯಿತಿಗಳ ಚುನಾವಣೆ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಮುಕ್ತಾಯವಾಗಿದ್ದು, ಗ್ರಾಮ ಸ್ವರಾಜ್ ಪರಿಕಲ್ಪನೆ ಅಡಿಯಲ್ಲಿ ಗ್ರಾಮಗಳ ಅಭಿವೃದ್ಧಿ ಜತೆಗೆ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆ ಕಾನೂನು ತರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರತಿ ತಿಂಗಳು ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸುತ್ತಾ ಬಂದಿದ್ದೇವೆ. ಕಾರ್ಯಕಾರಿಣಿ ಸಭೆಯಲ್ಲಿ ಎರಡು ನಿರ್ಣಯ ಕೈಗೊಂಡಿದ್ದೇವೆ. ಗ್ರಾಮ ಪಂಚಾಯತಿ ಚುನಾವಣೆ ಮತ್ತು ಕಾರ್ಯಕರ್ತರ ಚುನಾವಣೆ. ಅಪೇಕ್ಷಿತ ಕಾರ್ಯಕರ್ತರಿಗೆ ನಾಯಕರು ಬೆಂಬಲ, ಸಹಕಾರ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಉಪಚುನಾವಣೆಗೆ ಈಗಾಗಲೇ ಪ್ರಭಾರಿ ಘೋಷಣೆ ಮಾಡಿದ್ದೇವೆ. ಚುನಾವಣಾ ನಿರ್ವಹಣಾ ಸಮಿತಿಗೆ ಉಪಚುನಾವಣೆಗೆ ಜವಾಬ್ದಾರಿ ಕೊಡಲಾಗಿದೆ. ಮಸ್ಕಿ, ಬಸವಕಲ್ಯಾಣ ಕ್ಷೇತ್ರಕ್ಕೆ ಪ್ರಭಾರಿಗಳ ನೇಮಕ ಮಾಡಿದ್ದೇವೆ. ಈಗಾಗಲೇ ಸುಳ್ಯದಲ್ಲಿ ಒಂದು ಲವ್ ಜಿಹಾದ್ ಪ್ರಕರಣ ದಾಖಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ತುಂಬಾ ಆತಂಕದ ವಿಷಯವಾಗಿದೆ. ಇಂದು ಲವ್ ಜಿಹಾದ್‌ಗೆ ಕಾನೂನು ತರುವ ಬಗ್ಗೆ ನಿರ್ಣಯ ಮಾಡಿದ್ದೇವೆ. ಬಿಲ್ ಪಾಸ್ ಮಾಡುವ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತೆ. ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟಿದ್ದು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಗೊಂದಲಗಳು ಇಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚಿಸಿ ಸಿಎಂ ನಿರ್ಧಾರ ಕೈಗೊಳ್ಳುತ್ತಾರೆ. ಸಾಮಾಜಿಕವಾಗಿ, ಭೌಗೋಳಿಕವಾಗಿ ಯಾರಿಗೆ ಪ್ರಾತಿನಿಧ್ಯ ಕೊಡಬೇಕೆಂದು ಚರ್ಚೆ ನಡೆದಿದೆ ಎಂದರು.
ಇದನ್ನೂ ಓದಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಬಗ್ಗೆ ತೀರ್ಮಾನ ಮಾಡಿದ್ದೇವೆ: ಬಿಎಸ್ವೈ
ಕಾಂಗ್ರೆಸ್ ಜತೆಗೆ ಮೈತ್ರಿ ಬಗ್ಗೆ ಹೆಚ್ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೆಚ್.ಡಿ.ಕುಮಾರಸ್ವಾಮಿಗೆ ತಡವಾಗಿ ಜ್ಞಾನೋದಯವಾಗಿದೆ ಎಂದರು.