ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪದವಿ ಕಾಲೇಜಿನಲ್ಲಿ ಕನ್ನಡ ಕಡ್ಡಾಯ ಅಲ್ಲವೆಂದು ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಕನ್ನಡಿಗರಿಗೆ ಬರಸಿಡಿಲು ಬಡಿದಂತಾಗಿದೆ ಎಂದು ಕನ್ನಡ ಪರ ಹೋರಾಟಗಾರ, ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ಆದ್ರೆ ಪದವಿಯಲ್ಲಿ ಕನ್ನಡ ಕಲಿಯಬಾರದು ಅಂತಾದ್ರೆ, ಮುಂದೆ ಕರ್ನಾಟಕದಲ್ಲಿ ಕನ್ನಡಿಗರ ಪರಿಸ್ಥಿತಿ ಏನು? ಕನ್ನಡಿಗರಿಗೆ ಉದ್ಯೋಗ ಪರಿಸ್ಥಿತಿ ಏನು? ಎಂದು ಕಳವಳ ವ್ಯಕ್ತಪಡಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ನಮ್ಮನ್ನು ಕೊಂದು, ಪ್ರಾದೇಶಿಕ ಭಾಷೆಯನ್ನು ತುಳಿದಿದೆ. ಈ ಸಂದರ್ಭದಲ್ಲಿ ಭಾಷಾವಾರು ಪ್ರಾಂತ್ಯಗಳು ಈ ಬಗ್ಗೆ ಸಮಗ್ರ ಚರ್ಚೆ ಮಾಡಬೇಕಿದೆ. ಹಾಗಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್ಇಪಿ) ಬದಲಾವಣೆ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಿ ಎಂದರು.
ಇದನ್ನೂ ಓದಿ: ಬೆಳಗಾವಿ ಮೊದಲು 3 ಜಿಲ್ಲೆಯಾಗಲಿ, ಸಿದ್ದರಾಮಯ್ಯ ರಿಟೈರ್ಡ್ ಆಗಲಿ: ಸಚಿವ ಕತ್ತಿ