ಹೊಸಪೇಟೆ : ಮುಸ್ಲಿಂ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಶಂಕರ ಆನಂದ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಪ್ರತಿಭಟಿಸಿದರು.
ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತರಿಂದ ಶುಲ್ಕ ಪಡೆಯಬೇಕು ಎಂದು ಆದೇಶಿಸಿದೆ. ಆದರೆ, ಶಂಕರ ಆನಂದ ಸಿಂಗ್ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಮಾತ್ರ ಹೆಚ್ಚುವರಿ ಶುಲ್ಕ ಪಡೆಯಲಾಗುತ್ತಿದೆ. ಅಲ್ಪಸಂಖ್ಯಾತರ ಪಟ್ಟಿಗೆ ಮುಸ್ಲಿಂ ವರ್ಗದವರು ಮಾತ್ರ ಬರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್‌ನಿಂದ ಜನ ಆರ್ಥಿಕವಾಗಿ ತತ್ತರಿಸಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದು ಸರಿಯಲ್ಲ. ಕೂಡಲೇ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.