ಬಳ್ಳಾರಿ: ನಿರಂತರ ಪರಿಶ್ರಮವಿದ್ದಾಗ ಯಶಸ್ಸು ತಾನಾಗಿಯೇ ದೊರೆಯುತ್ತದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಸಚಿ ಡಾ. ಅಶೋಕಕುಮಾರ ರಂಜೇರೆ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಶೇಷ ಘಟಕವು ಏರ್ಪಡಿಸಿದ್ದ ಐಎಎಸ್, ಕೆಎಎಸ್, ಎನ್ಇಟಿ, ಸ್ಲೆಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ನಾವೆಲ್ಲ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುತ್ತಿದ್ದೇವೆ. ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವಾಗ ವಿಷಯಕ್ಕೆ ಸಂಬಂಧಪಟ್ಟ ಪಠ್ಯಗಳನ್ನು ಮನನ ಮಾಡಿಕೊಂಡು ಅದಕ್ಕೆ ಅನುಗುಣವಾಗಿ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಾಗ ಖಂಡಿತವಾಗಿಯೂ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಈ ಮೂಲಕ ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ ಎಂದರು.