ಬೆಂಗಳೂರು: ರಾಜ್ಯದಲ್ಲಿ 31 ಸಾವಿರ ಮನೆಗಳ ನಿರ್ಮಾಣಕ್ಕೆ 183 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಯಲ್ಲಿ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಡಿ.ಎಸ್.ಹೂಲಗೇರಿ ಅವರ ಪರವಾಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರ್ಹ ಫಲಾನುಭವಿಗಳ ಖಾತೆಗೆ ಈ ಹಣವನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಾಣದ ಪ್ರಗತಿಯ ಮಾಹಿತಿ ಪಡೆಯುವ ಸಂಬಂಧ ಶಾಸಕರಿಗೆ ಪತ್ರ ಬರೆದು ವಿಧಾನಸಭಾ ಕ್ಷೇತ್ರವಾರು ಮಾಹಿತಿ ಪಡೆಯಲಾಗುವುದು ಎಂದರು.
ಹಣದ ಕೊರತೆಯಿಂದ ಯಾವುದೇ ಮನೆ ನಿರ್ಮಾಣ ವಿಳಂಬವಾಗಿಲ್ಲ, ವಿವಿಧ ವಸತಿ ಯೋಜನೆಯಡಿ ತಾಲೂಕುವಾರು ಪಟ್ಟಿ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗೆ ಕಳೆದ ನವೆಂಬರ್ನಲ್ಲೇ ಆದೇಶ ನೀಡಲಾಗಿದೆ. ಈ ಸಂಬಂಧ 53 ಸಾವಿರ ಮನೆಗಳ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಅಂಬೇಡ್ಕರ್, ವಾಜಪೇಯಿ, ಬಸವ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅನಾನುಕೂಲವಾಗಬಾರದು ಎಂಬ ಉದ್ದೇಶದಿಂದ ಉಪ ಸಮಿತಿಯನ್ನು ಕೂಡ ರಚಿಸಲಾಗಿದೆ ಎಂದರು.