ಬೆಂಗಳೂರು: ಚಾಮರಾಜಪೇಟೆ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎನ್ನುವ ವರದಿ ಸತ್ಯಕ್ಕೆ ದೂರವಾಗಿದೆ. ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಜಮೀರ್ ಅಹಮದ್ ಅವರ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಯಡಿಯೂರಪ್ಪ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ರಿಯ ವಿವಾಹಕ್ಕೆ ಆಹ್ವಾನಿಸಲು ಸಿಎಂ ಅಧಿಕೃತ ನಿವಾಸ ಕಾವೇರಿಗೆ ಜಮೀರ್ ಅಹಮದ್ ಭೇಟಿ ನೀಡಿದ್ದರು. ಈ ವೇಳೆ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಬರುವಂತೆ ಮನವಿ ಮಾಡಿದ್ದು, ಸಿಎಂ ಭೇಟಿಯ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಅದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವ ವರದಿ ಪ್ರಕಟಗೊಂಡಿತ್ತು. ಇದೀಗ ಸ್ವತಃ ಸಿಎಂ ಯಡಿಯೂರಪ್ಪ ಈ ಸುದ್ದಿಗೆ ತೆರೆ ಎಳೆದಿದ್ದಾರೆ.