ಬೆಂಗಳೂರು: ಬನ್ನೇರುಘಟ್ಟ-ತುಮಕೂರು ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಬನ್ನೇರುಘಟ್ಟದಿಂದ ತುಮಕೂರು ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರನ್ನು ಫಾದ್ಜಿಲ್, ಅಭಿಲಾಶ್, ಶಿಲ್ಪಾ ಹಾಗೂ ಜೀನಾ ಎಂದು ಗುರುತಿಸಲಾಗಿದೆ. ಎರಡು ಕಾರು, ಒಂದು ಕ್ಯಾಂಟರ್ಗೆ ಲಾರಿ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಫಾದ್ಜಿಲ್, ಅಭಿಲಾಶ್ ಮತ್ತು ಜೀನಾ ಸಾಫ್ಟ್ವೇರ್ ಇಂಜಿನಿಯರ್ ಮತ್ತು ಶಿಲ್ಪಾ ಖಾಸಗಿ ಶಾಲೆ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಎಲ್ಲರೂ 25ರಿಂದ 30 ವರ್ಷ ವಯೋಮಾನದವರಾಗಿದ್ದಾರೆ ಎಂದಿದ್ದಾರೆ.
ಕುಮಾರಸ್ವಾಮಿ ಲೇಔಟ್ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ನೈಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, 8 ಕಿಮೀ ದೂರದವರೆಗೂ ವಾಹನಗಳು ಸಾಲಾಗಿ ನಿಂತಿದ್ದವು. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ:
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು. ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು : ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೂವರ ಸಾವು!