ಬೆಂಗಳೂರು: ರಾಜ್ಯದಲ್ಲಿ 2017 ಮತ್ತು 2018ರಲ್ಲಿ ಕ್ರಮವಾಗಿ 2,160 ಹಾಗೂ 2,405 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2016ನೇ ಸಾಲಿನ ಬೆಳೆ ನಷ್ಟ ಪರಿಹಾರ ನೀಡಲು ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಯಾದಗಿರಿಯ ಶಹಾಪುರ ರೈತರು ಮತ್ತು ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ಡಿ. ರೊಜಾರಿಯೊ, ರೈತರ ಆತ್ಮಹತ್ಯೆ ಕುರಿತ ಅಂಕಿ-ಅಂಶದ ಮೆಮೊ ಪ್ರತಿಯನ್ನು ನ್ಯಾಯಪೀಠಕ್ಕೆ ನೀಡಿದ್ರು.
2017ರಲ್ಲಿ 115 ರೈತ ಮಹಿಳೆಯರೂ ಸೇರಿದಂತೆ 2,160 ರೈತರು ಮತ್ತು 2018ರಲ್ಲಿ 173 ರೈತ ಮಹಿಳೆಯರು ಒಳಗೊಂಡು 2,405 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಿವರಿಸಿದರು. ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದು, ಮನವಿ ಪರಿಗಣಿಸಿದ ಪೀಠ ವಿಚಾರಣೆಯನ್ನ ಮಾರ್ಚ್ 30ಕ್ಕೆ ಮುಂದೂಡಿದೆ.
ಅರ್ಜಿದಾರರ ಕೋರಿಕೆ: ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ರೈತರಿಗೆ ತುರ್ತಾಗಿ ಪರಿಹಾರ ನೀಡಬೇಕು. ಬೆಳೆ ನಷ್ಟದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕಲ್ಪಿಸಲು ಹಾಗೂ ಆರ್ಥಿಕ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ರೈತರ ಮೂಲಭೂತ ಹಕ್ಕುಗಳನ್ನು ಕಾಪಾಡಬೇಕು. ಬೆಳೆ ವಿಮೆ ಹೊಂದಿರುವ ರೈತರಿಗೆ ವಿಮಾ ನಷ್ಟ ಪರಿಹಾರ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.