ಬೆಂಗಳೂರು: ಮೈಸೂರಿನಿಂದ ನಗರಕ್ಕೆ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರಿನ ನಿವಾಸಿ ಮೊಹಮದ್ ಶಫಿ (32) ಹತ್ಯೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಶುಕ್ರವಾರ ಮೈಸೂರಿನಿಂದ ಕೆಲಸದ ನಿಮಿತ್ತ ಶಫಿ ಬೆಂಗಳೂರಿನ ಗುರಪ್ಪನ ಪಾಳ್ಯಕ್ಕೆ ಬಂದಿದ್ದರು. ಸಂಜೆ 6.30 ರ ಸುಮಾರಿಗೆ ಸುದ್ದಗುಂಟೆಪಾಳ್ಯದ ಟಿಂಬರ್ಗಲ್ಲಿ ಬಳಿ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಶಫಿ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸುದ್ದಿ ತಿಳಿದು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಜವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.