ಬೆಂಗಳೂರು: ಕೆಪಿಸಿಸಿ ವಿವಿಧ ಸಮಿತಿಗಳಿಗೆ ಮುಖ್ಯಸ್ಥರ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ನೂತನ ಆದೇಶ ಇಂದು ಹೊರ ಬಿದ್ದಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿಯ ವಿವಿಧ ವಿಭಾಗಗಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ನೇಮಿಸಲಾಗಿದ್ದು, ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಅನ್ವಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದೇಶದನ್ವಯ ಕಾನೂನು ಮಾನವ ಹಕ್ಕು ಹಾಗೂ ಆರ್ಟಿಐ ವಿಭಾಗದ ಮುಖ್ಯಸ್ಥರನ್ನಾಗಿ ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾಗಿ ಬಿ.ಎಲ್.ಶಂಕರ್ ನೇಮಕವಾಗಿದ್ದಾರೆ. ಇವರು ಇದುವರೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮತ್ತೋರ್ವ ಪ್ರಧಾನ ಕಾರ್ಯದರ್ಶಿ ವಿ.ಆರ್.ಸುದರ್ಶನ್ ಉಪಾಧ್ಯಕ್ಷರಾಗಿ ನಿಯೋಜಿತರಾಗಿದ್ದಾರೆ.
ಮಾಹಿತಿ ತಂತ್ರಜ್ಞಾನ ಹಾಗೂ ದಾಖಲೆ ಸೆಲ್ ಮುಖ್ಯಸ್ಥರಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ನೇಮಕಗೊಂಡಿದ್ದಾರೆ. ಕಾನೂನು ವಿಭಾಗದ ಮುಖ್ಯಸ್ಥರಾಗಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇಮಕವಾಗಿದ್ದಾರೆ. ಇವರು ಇದುವರೆಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಾಂಗ್ರೆಸ್ ಪಕ್ಷದ ರಾಜ್ಯಮಟ್ಟದ ಆಸ್ತಿ ಹಾಗೂ ಸ್ವತ್ತಿನ ಮುಖ್ಯಸ್ಥರಾಗಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತು ಕಾಂಗ್ರೆಸ್ ಪಕ್ಷದ ಬೆಂಗಳೂರು ವಿಭಾಗದ ಆಸ್ತಿ ಮತ್ತು ಸ್ವತ್ತಿನ ಮುಖ್ಯಸ್ಥರಾಗಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇಮಕವಾಗಿದ್ದಾರೆ.