ಬೆಂಗಳೂರು: ರಾಜ್ಯಸಭೆ ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಎಐಸಿಸಿ ಅಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯ ಅಭ್ಯರ್ಥಿಯ ಬಗ್ಗೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರ ಜೊತೆ ಚರ್ಚೆ ಮಾಡಿ ಅಭ್ಯರ್ಥಿ ಯಾರಾಗಬೇಕೆಂಬುದನ್ನು ತೀರ್ಮಾನ ಮಾಡುತ್ತಾರೆ ಎಂದರು.
ಈಗಾಗಲೇ ಚುನಾವಣೆ ಪ್ರಕ್ರಿಯೆ ಆರಂಭವಾಗಿರುವುದರಿಂದ ಶೀಘ್ರ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಾರೆ ಎಂದು ಹೇಳಿದರು. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಹೆಚ್ ಕೆ ಪಾಟೀಲ್, ಈ ಬಗ್ಗೆ ಕೂಡ ಎಐಸಿಸಿ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಷ್ಟೇ ಹೇಳಿದರು.