ಬೆಂಗಳೂರು: ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ, ಹಳೆಯ ಜೈಲು ಆವರಣದಲ್ಲಿ ಸ್ವಾತಂತ್ರ್ಯ ಉದ್ಯಾನ, ಇಎಸ್‍ಐ ಆಸ್ಪತ್ರೆ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳು ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದು ಸಂಸದ ಬಿ ವೈ ರಾಘವೇಂದ್ರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವರ್ತುಲ ರಸ್ತೆಯು ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಹಾದು ಹೋಗಬೇಕಾಗಿತ್ತು. ಆದರೆ, ರೈಲ್ವೆ ಇಲಾಖೆ ನೀಡಿದ್ದ ತಡೆಯಿಂದಾಗಿ ನೆನಗುದಿಗೆ ಬಿದ್ದಿತ್ತು. ಪ್ರಸ್ತುತ ಆ ಸಮಸ್ಯೆ ನಿವಾರಣೆಯಾಗಿದ್ದು, ಶೀಘ್ರವೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100 ಅಡಿ ವರ್ತುಲ ರಸ್ತೆ ನಿರ್ಮಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಾಕಿಯಿದ್ದ 700 ಮೀಟರ್ ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಅಂದಾಜು ₹ 20 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ.
ನಾಲ್ಕು ಪಥದ ಈ ಕಾಂಕ್ರೀಟ್ ರಸ್ತೆಯು, ರೈಲ್ವೆ ನಿಲ್ದಾಣದ ಎರಡೂ ಕಡೆಗಳಲ್ಲಿ ಸಂಪರ್ಕ ಕಲ್ಪಿಸುತ್ತದೆ. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಶಂಕು ಸ್ಥಾಪನೆ ನೆರವೇರಿಸಿದ್ದ ಈ ಯೋಜನೆಯನ್ನು ಅವರೇ ಪೂರ್ಣಗೊಳಿಸುವಂತಾಗಿದೆ ಎಂದು ಸಂಸದರು ಸಂತಸ ವ್ಯಕ್ತಪಡಿಸಿದ್ದಾರೆ.