ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜು ಆರಂಭವಾಗಬೇಕಾ? ಬೇಡವಾ? ಎಂಬ ಚರ್ಚೆಗಳು ನಡೆದಿದ್ದವು. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ ಎಲ್ಲಾ ಪದವಿ ಕಾಲೇಜುಗಳು, ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳನ್ನು ಮಾತ್ರ ಪುನಾರಂಭ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಇದೇ ನವೆಂಬರ್ 17 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಕಾಲೇಜುಗಳ ಪರಿಸ್ಥಿತಿ ನೋಡಿಕೊಂಡು ಬಳಿಕ ಶಾಲೆ ಆರಂಭದ ಬಗ್ಗೆ ಶಿಕ್ಷಣ ಇಲಾಖೆ ನಿರ್ಧರಿಸಲಿದೆ. ಶಾಲೆ ಆರಂಭದ ಕುರಿತು ಚರ್ಚಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಈಗಾಗಲೇ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಂಸದರು, ಶಾಸಕರುಗಳಿಗೆ ಪತ್ರ ಬರೆದು ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಇಂದು ಆಯಾ ಜಿಲ್ಲೆಗಳ ಉಪನಿರ್ದೇಶಕರು, ಬಿಇಒಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಆದರೆ ಯುರೋಪ್ ದೇಶಗಳಲ್ಲಿ ಮತ್ತೆ ಕೊರೊನಾ ಅಬ್ಬರಿಸಿದ್ದು, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿಯಲ್ಲಿ ಮತ್ತೊಂದು ಸುತ್ತಿನ ಲಾಕ್ಡೌನ್ ಹೇರಲಾಗಿದೆ. ಸ್ಪೇನ್, ಇಟಲಿಯಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ ರಾಜ್ಯದಲ್ಲಿ ಕೂಡ ಕೊರೊನಾ ಮತ್ತೊಂದು ಅಲೆ ಸಾಧ್ಯತೆ ಇರುವ ಕಾರಣ ಸದ್ಯ ಶಾಲೆ ಆರಂಭದ ಬಗ್ಗೆ ಸ್ಪಷ್ಟನೆ ಇಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದ್ದು ಇಂದು ಸಾಧಕ-ಬಾಧಕದ ಬಗ್ಗೆ ಚರ್ಚಿಸಲಿದ್ದಾರೆ. ಶಾಲೆ ಆರಂಭವಾದರೆ ಯಾವೆಲ್ಲಾ ಜಾಗೃತ ಕ್ರಮಕೈಗೊಳ್ಳಬೇಕು? ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಚರ್ಚೆ ನಡೆಯಲಿದೆ.