ಬೆಂಗಳೂರು: ಅನರ್ಹ ಶಾಸಕ ಡಾ.ಕೆ.ಸುಧಾಕರ್ ಮೇಲೆ ವಿಧಾನಸೌಧದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ ಎಂದು ಸರ್ಕಾರಿ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಇತ್ತೀಚೆಗೆ ಅನರ್ಹ ಶಾಸಕ ಡಾ.ಕೆ. ಸುಧಾಕರ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪ್ರಶ್ನಿಸಿ ಹಿರಿಯ ವಕೀಲ ಅಮೃತೇಶ್ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಭಾಗೀಯ ಪೀಠದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಪಿಐಎಲ್ ವಿಲೇವಾರಿ ಮಾಡಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.
ಪ್ರಕರಣ ಹಿನ್ನೆಲೆ :
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದ ಸಂದರ್ಭದಲ್ಲಿ ಡಾ.ಕೆ.ಸುಧಾಕರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ತೆರಳುತ್ತಿದ್ದಾಗ ಅಂದಿನ ಸಚಿವರು ಸೇರಿದಂತೆ ಕೆಲ ಕಾಂಗ್ರೆಸ್ ಮುಖಂಡರು ತಳ್ಳಾಟ ನಡೆಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದರೂ ಎಫ್ಐಆರ್ ಮಾತ್ರ ದಾಖಲಾಗಿರಲಿಲ್ಲ. ಹಾಗಾಗಿ, ತನಿಖೆಗೆ ಆದೇಶಿಸಲು ಕೋರಿ ವಕೀಲ ಅಮೃತೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.