ಬೆಂಗಳೂರು : ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಬಸವರಾಜ ಸೋಮಪ್ಪ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಎಂದು ಘೋಷಿತವಾಗ್ತಿದ್ದಂತೆಯೇ, ಹೋಟೆಲ್‌ನಿಂದ ನೇರವಾಗಿ ಬಸವರಾಜ ಬೊಮ್ಮಾಯಿ ರಾಜಭವನಕ್ಕೆ ತೆರಳಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕುಮಂಡಿಸಿದರು.
ಬೊಮ್ಮಾಯಿ ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ನಾಯಕ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಇತರ ನಾಯಕರು ಇದ್ದರು.
ಪ್ರಮಾಣವಚನ ಬೋಧನೆ ಹಾಗೂ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ಸಂಬಂಧಿಸಿ ಆಗಮಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯಪಾಲರು ಅಭಿನಂದಿಸಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿಯೋಜಿತರಾಗಿರುವುದಕ್ಕೆ ಶುಭ ಕೋರಿದ್ದಾರೆ.
ಮುಂಬರುವ ದಿನಗಳಲ್ಲಿ ಸರ್ಕಾರಕ್ಕೆ ಸಹಕಾರ ನೀಡುವಂತೆ ಬಸವರಾಜ್ ಬೊಮ್ಮಾಯಿ ಕೋರಿದ್ದಾರೆ. ಜೊತೆಗೆ ಸಚಿವ ಸಂಪುಟ ರಚನೆಯನ್ನು ಆದಷ್ಟು ತ್ವರಿತವಾಗಿ ಮಾಡಲು ಅವಕಾಶ ನೀಡುವ ಭರವಸೆ ನೀಡಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ತಮಗೆ ಜವಾಬ್ದಾರಿ ಹೆಚ್ಚಿದ್ದು, ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಿರಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಸಲಹೆ ನೀಡಿದ್ದಾರೆ.