ಬೆಂಗಳೂರು: ನಗರದಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಬರುವ ಜನವರಿ 3ರಿಂದ ಲಸಿಕೆ ನೀಡುವ ಸಲುವಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡು ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಕೋವಿಡ್ ನಿಯಂತ್ರಿಸುವ ಸಂಬಂಧ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಪಟ್ಟಿಯನ್ನು ವಲಯವಾರು ಸಿದ್ದಪಡಿಸಿಕೊಂಡು, ಎಲ್ಲ ಶಾಲಾ-ಕಾಲೇಜುಗಳಿಗೆ ಲಸಿಕೆ ನೀಡುವ ಸಿಬ್ಬಂದಿಯ ನಿಯೋಜನೆ ಮಾಡಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
![bbmp chief commissioner on covid vaccination to children](https://etvbharatimages.akamaized.net/etvbharat/prod-images/kn-bng-05-15to18-years-children-vaccination-drive-from-jan3-must-be-succesfully-implemented-preparation-should-get-priority-ka10032_28122021234132_2812f_1640715092_216.jpg)
ಬಿಬಿಎಂಪಿ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ 15ರಿಂದ 18 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಬೇಕು. ಈ ಸಂಬಂಧ ಕೊಳಗೇರಿ ಪ್ರದೇಶ, ಕೈಗಾರಿಕಾ ಪ್ರದೇಶಗಳಲ್ಲಿರುವ ಮಕ್ಕಳನ್ನು ಗುರುತಿಸಿ ಎನ್ಜಿಒಗಳ ಸಹಯೋಗದೊಂದಿಗೆ ಲಸಿಕೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ಜನವರಿ 10ರಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಸಂಬಂಧ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಎಲ್ಲೆಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿವೆ ಅಂತಹ ಪ್ರದೇಶಗಳಲ್ಲಿ ಕೂಡಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಮರ್ಪಕವಾಗಿ ಕಾಂಟ್ಯಾಕ್ಟ್ ಟ್ರೇಸಿಂಗ್ ಮಾಡುವ ಮೂಲಕ ಕೋವಿಡ್ ಸೋಂಕನ್ನು ಮೂಲದಲ್ಲಿಯೇ ನಿಯಂತ್ರಿಸಲು ಕ್ರಮ ಕೈಗೊಳ್ಳಿ. ಹೆಚ್ಚು ಜನಸಂದಣಿ ಸೇರುವ ಪ್ರದೇಶ, ಖಾಸಗಿ ಪಾರ್ಟಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವುದು ಹಾಗೂ ಇಂತಹ ಕಡೆ ಹೋಗುವುದನ್ನು ನಿಯಂತ್ರಿಸಲು ಜನರಲ್ಲಿ ತಿಳುವಳಿಕೆ ಮೂಡಿಸಬೇಕು.
ಆಯಾ ವಾರ್ಡ್ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಆರೋಗ್ಯ ವೈದ್ಯಾಧಿಕಾರಿಗಳು ಸಭೆ ನಡೆಸಿ ಕೋವಿಡ್ ಹೆಚ್ಚಿರುವ ಪ್ರದೇಶಗಳ ಮೇಲೆ ನಿಗಾವಹಿಸಿ ಕೋವಿಡ್ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ನಗರದಲ್ಲಿ ಪ್ರತಿನಿತ್ಯ ಸುಮಾರು 45,000 ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಸೂಚಿಸಿ ಲಸಿಕೆ ಪಡೆಯದವರನ್ನು ಗುರುತಿಸಿ ಲಸಿಕೆ ನೀಡಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ವಿಧಿಸಿರುವ ನಿರ್ಬಂಧಗಳ ಜಾರಿಗಾಗಿ ಆಯಾ ವಲಯ ಮಟ್ಟದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಕೋವಿಡ್ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ರೆಸ್ಟೋರೆಂಟ್, ವಾಣಿಜ್ಯ ಉದ್ದಿಮೆಗಳಲ್ಲಿ ಕೋವಿಡ್ ನಿಯಮಗಳು ಉಲ್ಲಂಘಿಸುವುದು ಕಂಡುಬಂದಲ್ಲಿ ದಂಡ ವಿಧಿಸಿ, ಕಾನೂನು ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
15-17 ವರ್ಷದ ವಯಸ್ಸಿನ ಸುಮಾರು 5 ಲಕ್ಷ ಮಕ್ಕಳಿಗೆ ಲಸಿಕೆ: ವಿಶೇಷ ಆಯುಕ್ತರು(ಆರೋಗ್ಯ) ಡಾ. ತ್ರಿಲೋಕ್ ಚಂದ್ರ ಸಭೆಯಲ್ಲಿ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 15-17 ವರ್ಷದ ವಯಸ್ಸಿನ ಸುಮಾರು 5 ಲಕ್ಷ ಮಕ್ಕಳಿದ್ದು, ಅವರಿಗೆ ಜನವರಿ 3ರಿಂದ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. ಇದಕ್ಕಾಗಿ ಸ್ಥಳೀಯ ಶಿಕ್ಷಣ ಸಂಸ್ಥೆಗಳಲ್ಲಿನ ಈ ವಯಸ್ಸಿನ ಅರ್ಹ ಮಕ್ಕಳು, ಶಾಲೆಯಿಂದ ಹೊರಗುಳಿದಿರುವ ಮತ್ತು ಕೈಗಾರಿಕಾ ವಲಯಗಳಲ್ಲಿ ಕೆಲಸಕ್ಕೆ ಸೇರಿಕೊಂಡಿರುವ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲಾಗುವುದು ಎಂದರು.
ಈ ಪೈಕಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ, ಲಸಿಕಾ ಫಲಾನುಭವಿ ಮಕ್ಕಳ ಸಂಖ್ಯೆ ಹಾಗೂ ಲಸಿಕಾಕರಣ ನಡೆಯುವ ಸ್ಥಳಗಳ ಸಂಖ್ಯೆ ಇತ್ಯಾದಿ ಸಹಿತ ಮಾಹಿತಿ ಕಲೆಹಾಕಿ ವಲಯವಾರು ಕ್ರಿಯಾ ಯೋಜನೆಯನ್ನು ತಯಾರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಬೆಂಗಳೂರಿನ ಎಲ್ಲ ವಲಯದ ಜಂಟಿ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ(ಆರೋಗ್ಯ) ಡಾ. ಬಾಲಸುಂದರ್, ಎಲ್ಲಾ ವಲಯ ಆರೋಗ್ಯ ಅಧಿಕಾರಿಗಳು, ಅರೊಗ್ಯವೈದ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ: ಒಮ್ರಿಕಾನ್ ಭೀತಿ: ಬೆಳಗಾವಿಯಲ್ಲಿ ನೈಟ್ ಕರ್ಪ್ಯೂ ಜಾರಿ..