ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಕೊರೊನಾ 3ನೇ ಅಲೆ ತಪ್ಪಿಸಲು ಹಾಗು ಮುಂಜಾಗ್ರತ ಕ್ರಮವಾಗಿ ಸಿದ್ಧತೆ ಮಾಡಿಕೊಳ್ಳಲು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಹಾಗು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರೊಂದಿಗೆ ಸಭೆ ನಡೆಸಿದರು.
ಮಹಾರಾಷ್ಟ್ರ ಹಾಗು ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿಂದ ಬೆಂಗಳೂರಿಗೆ ಆಗಮಿಸುವವರ ಸಂಖ್ಯೆ ಅಧಿಕವಾಗಿದೆ. ಈ ನಿಟ್ಟಿನಲ್ಲಿ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಕೈಗೊಳ್ಳಬೇಕಾದ ಅಂಶಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಕೊರೊನಾ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಇಂದು ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಎರಡನೇ ಅಲೆಯಲ್ಲಿ ಒಟ್ಟಿಗೆ ಕೆಲಸ ಮಾಡಿ ಪರಿಣಾಮಕಾರಿಯಾಗಿ ಎದುರಿಸಿದ್ದೇವೆ. ಅನ್ಲಾಕ್ ಆಗಿ ಸಾಮಾನ್ಯ ಸ್ಥಿತಿಗೆ ಬಂದಿದ್ದೇವೆ. ಆದರೆ ಪಕ್ಕದ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಆ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ನೆರೆ ರಾಜ್ಯದಿಂದ ಬಂದವರಿಂದ ಸೋಂಕು ಹರಡಬಾರದು ಎಂಬ ಉದ್ದೇಶದಿಂದ ಹೆಚ್ಚು ಕ್ರಮ ವಹಿಸಲಾಗುತ್ತಿದೆ ಎಂದರು.
ಕೊರೊನಾ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ವರದಿಯಲ್ಲಿ ಪಾಸಿಟಿವ್ ಕಂಡು ಬಂದರೆ ಕ್ವಾರಂಟೈನ್ ಮಾಡಲಾಗುತ್ತಿದೆ. ಮಹಾರಾಷ್ಟ್ರ ಹಾಗು ಕೇರಳದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರಬೇಕು. ಒಂದು ವೇಳೆ ವರದಿ ಇಲ್ಲದೆ ಹಾಗೆಯೇ ಬಂದರೆ ಆಯಾ ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ಕೂಡಲೇ ಕೊರೊನಾ ಪರೀಕ್ಷೆಗೆ ಒಳಪಡಿಸಿಲಾಗುವುದು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ ಕ್ವಾರಂಟೈನ್ಗೆ ಒಳಪಡಿಸಲಾಗುವುದು ಎಂದರು.
ನೈಟ್ ಕರ್ಫ್ಯೂ ಜಾರಿ ಬಗ್ಗೆ ಚರ್ಚೆ
ಸರ್ಕಾರ ಮಟ್ಟದಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಇಂದು ನಡೆದ ಸಭೆಯಲ್ಲಿ ಪೂರ್ವ ನಿಯೋಜಿತವಾಗಿ ಕೈಗೊಳ್ಳಬೇಕಾದ ಅಂಶಗಳ ಬಗ್ಗೆ ಮಾತ್ರ ಚರ್ಚೆ ನಡೆಸಲಾಗಿದೆ.
ನೈಟ್ ಕರ್ಪ್ಯೂ ಅಥವಾ ಪರಿಣಾಮಕಾರಿ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿದ ಆಯುಕ್ತರು ರಾತ್ರಿ ಕರ್ಫ್ಯೂ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಬೇಕಿದೆ. ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಈ ಬಗ್ಗೆ ಸಮಾಲೋಚನೆ ನಡೆಯಲಿದೆ ಎಂದರು.
ಸಭೆಯಲ್ಲಿ ಮಾಸ್ಕ್, ಸಾಮಾಜಿಕ ಅಂತರ ಬಗ್ಗೆ ಹೆಚ್ಚು ನಿಗಾವಹಿಸಲು ಸೂಚಿಸಲಾಗಿದೆ. ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಎಚ್ಚರಿಕೆ ವಹಿಸಬೇಕು. ಕೋವಿಡ್ ಹೆಚ್ಚು ಇರುವ ಕಡೆ ಮೈಕ್ರೊ ಕಂಟೈನ್ಮೆಂಟ್ ಮತ್ತು ಕಂಟೈನ್ಮೆಂಟ್ ಝೋನ್ ನಿರ್ಮಾಣ ಮಾಡುವುದು ಹಾಗು 3ನೇ ಅಲೆಗೆ ಬೇಕಿರುವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.