ನವದೆಹಲಿ/ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಪರೋಕ್ಷವಾದ ಸೂಚನೆಯನ್ನು ಸುಪ್ರೀಂ ಕೋರ್ಟ್ ಇಂದು ನೀಡಿದೆ. ಈ ಸಂಬಂಧ ಗುರುವಾರ ನಡೆದ ಅರ್ಜಿ ವಿಚಾರಣೆಯಲ್ಲಿ ಒಂದು ವಾರದೊಳಗೆ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಆಗಸ್ಟ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ. ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿ ಆಧರಿಸಿ ಚುನಾವಣೆಗೆ ದಿನಾಂಕವನ್ನು ನಿಗದಿ ಪಡಿಸುವ ಸಾಧ್ಯತೆ ಇದೆ.
ಇಂದಿನಿಂದ ಒಂದು ವಾರದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ಬಿಬಿಎಂಪಿ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಂ ಖಾನಿಲ್ಕರ್ ಪೀಠ, ಎಂಟು ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಲಾಗಿತ್ತು. ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು ಮೀಸಲಾತಿ ಸಂಬಂಧ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿ ವರದಿಯನ್ನು ವಿಳಂಬವಾಗಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದರು. ವಾದ ಆಲಿಸಿದ ಪೀಠ ವರದಿ ಆಧರಿಸಿ ಇಂದಿನಿಂದ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು ಎಂದು ಆದೇಶ ನೀಡಿತು. ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತು.
ಓದಿ: ಸುಪ್ರೀಂಕೋರ್ಟ್ ಆದೇಶ : ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ಜರುಗುವ ಸಾಧ್ಯತೆ