ಬೆಂಗಳೂರು: ನಗರದ ಬಳ್ಳಾರಿ ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಬೆಂಗಳೂರು ಅರಮನೆ ಜಾಗ ಸ್ವಾಧೀನ ವಿಚಾರವಾಗಿ ಮೈಸೂರು ರಾಜಮನೆತನಕ್ಕೆ ವರ್ಗಾವಣೆ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡುವ ಬಗ್ಗೆ ಉದ್ಭವಿಸಿರುವ ಗೊಂದಲಗಳನ್ನು ಸುಪ್ರೀಂಕೋರ್ಟ್‌ನಲ್ಲಿ ಬಗೆಹರಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಬಳ್ಳಾರಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೊಳ್ಳದಿರುವುದನ್ನು ಪ್ರಶ್ನಿಸಿ ನಗರದ ಸಮರ್ಪಣಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಅರಮನೆ ಮೈದಾನವನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಜಾಗದ ಮಾಲೀಕತ್ವ ಪ್ರಶ್ನಿಸಿ ಮೈಸೂರು ರಾಜ ಮನೆತನ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಇದೆ. ಹೀಗಾಗಿ, ಪ್ರಕರಣದಲ್ಲಿ ಯಾರಿಗೆ ಟಿಡಿಆರ್ ನೀಡಬೇಕೆಂಬ ಬಗ್ಗೆ ಇನ್ನೂ ಗೊಂದಲವಿದೆ. ಆದ್ದರಿಂದ ಸುಪ್ರೀಂ ಕೋರ್ಟ್‌ನಿಂದಲೇ ಸ್ಪಷ್ಟನೆ ಕೋರಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟನೆ ಕೋರಲು ರಾಜ್ಯ ಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು. ಜಯಮಹಲ್ ರಸ್ತೆ (ಮೇಖ್ರಿ ವೃತ್ತದಿಂದ ದಂಡು ರೈಲು ನಿಲ್ದಾಣದವರೆಗೆ) ಮತ್ತು ಬಳ್ಳಾರಿ ರಸ್ತೆ (ಮೇಖ್ರಿ ವೃತ್ತದಿಂದ ಬಿಡಿಎ ಜಂಕ್ಷನ್‌ವರೆಗೆ) ಅಗಲೀಕರಣ ಕಾರ್ಯಕ್ಕೆ ಅರಮನೆಗೆ ಸೇರಿದ 16 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಈ ಹಿಂದೆಯೇ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಅರ್ಜಿಯ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿತ್ತು.